ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಇದೀಗ ಪ್ರತಿಪಕ್ಷ ಬಿಜೆಪಿಯಲ್ಲೂ ಆಂತರಿಕ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮೇ 25ರ ಬಳಿಕ ಕರ್ನಾಟಕ ಬಿಜೆಪಿ ಘಟಕದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ ಎನ್ನುವ ಮಾತುಗಳು ಪಕ್ಷದ ವಲಯದಲ್ಲಿ ಜೋರಾಗಿ ಕೇಳಿಬರುತ್ತಿವೆ.ಬಿಜೆಪಿಯ ಆಂತರಿಕ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಹಲವು ದಿನಗಳಿಂದ ಚರ್ಚೆಯಲ್ಲಿರುವ ರಾಜ್ಯಾಧ್ಯಕ್ಷ ಸ್ಥಾನದ ಗೊಂದಲಕ್ಕೆ ಶೀಘ್ರವೇ ತೆರೆ ಬೀಳುವ ನಿರೀಕ್ಷೆ ಮೂಡಿದೆ. ಹೈಕಮಾಂಡ್ ಮೂಲಗಳ ಪ್ರಕಾರ, ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನೇ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 50 ವರ್ಷಗಳ ಸಾರ್ವಜನಿಕ ಜೀವನದ ಅಂಗವಾಗಿ ಆಯೋಜಿಸಿದ್ದ ‘ಅಭಿಮಾನೋತ್ಸವ’ ಕಾರ್ಯಕ್ರಮ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ರಾಜ್ಯದ ಮಠಾಧೀಶರನ್ನು ಒಂದೇ ವೇದಿಕೆಗೆ ತರಲು ಯಡಿಯೂರಪ್ಪ ಅವರೇ ಕಾರಣ” ಎಂದು ಶ್ಲಾಘಿಸಿದ್ದರು. ಈ ಹೇಳಿಕೆ ವಿಜಯೇಂದ್ರ ಬಣಕ್ಕೆ ರಾಜಕೀಯವಾಗಿ ಮತ್ತಷ್ಟು ಬಲ ತುಂಬಿದೆ ಎನ್ನಲಾಗುತ್ತಿದೆ.
ಚಿತ್ರದುರ್ಗ ಸಮಾವೇಶವನ್ನು ಕೇವಲ ಅಭಿಮಾನೋತ್ಸವ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದರೂ, ರಾಜಕೀಯ ವಿಶ್ಲೇಷಕರ ಪ್ರಕಾರ ಅದು ಯಡಿಯೂರಪ್ಪ ಅವರ ಶಕ್ತಿ ಪ್ರದರ್ಶನವಾಗಿತ್ತು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಸಮಾವೇಶದ ಯಶಸ್ಸಿನ ಬಳಿಕ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ಮತ್ತು ಸಂಘ ಪರಿವಾರದಲ್ಲೂ ಮೃದು ಧೋರಣೆ ಮೂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದೇ ವೇಳೆ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಪುನಾರಚನೆಯೂ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ. ಹಾಲಿ ಸಮಿತಿಯ ಇಬ್ಬರು ಪ್ರಮುಖ ಸದಸ್ಯರನ್ನು ಕೈಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಕೋರ್ ಕಮಿಟಿಯಲ್ಲಿ ಸ್ಥಾನ ಪಡೆಯಲು ಹಲವು ಹಿರಿಯ ನಾಯಕರು ತೀವ್ರ ಲಾಬಿ ನಡೆಸುತ್ತಿದ್ದಾರೆ. ಸಂಸದ ಜಗದೀಶದ ಶೆಟ್ಟರ ಕೇಂದ್ರ ಸಚಿವರಾದ ವಿ ಸೋಮಣ್ಣ ಹಾಗೂ ಶೋಭಾ ಕಂರದ್ಲಾಜೆ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಶಾಸಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಅವರ ಹೆಸರೂ ಸಹ ಮುಂಚೂಣಿಯಲ್ಲಿದೆ.ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೆರಡು ವರ್ಷ ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ, ರಾಜ್ಯ ಬಿಜೆಪಿಯಲ್ಲಿ ನಡೆಯಲಿರುವ ಈ ಬದಲಾವಣೆಗಳು ಪಕ್ಷದ ಭವಿಷ್ಯದ ರಾಜಕೀಯ ದಿಕ್ಕನ್ನು ನಿರ್ಧರಿಸುವ ಸಾಧ್ಯತೆ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















