Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೌಶಲ್ಯ ಉನ್ನತೀಕರಣವೇ ಯಶಸ್ಸಿನ ಗುಟ್ಟು : ಸಿ.ಎಸ್.ಗಾಯತ್ರಿ

---Advertisement---

 

ಚಿತ್ರದುರ್ಗ,ಜುಲೈ.15 : ಯಾವಾಗಲೂ ಮತ್ತು ಯಾವುದೇ ಪರಿಸ್ಥಿತಿಗೂ ಪ್ರಸ್ತುತವಾಗಿ ಉಳಿಯಬೇಕಾದರೆ ಕೌಶಲ್ಯ ನಿರಂತರವಾಗಿ ಉನ್ನತೀಕರಿಸಿಕೊಳ್ಳುವುದು ಅತ್ಯಗತ್ಯ. ಇದೇ ಯಶಸ್ಸಿನ ನಿಜವಾದ ಗುಟ್ಟು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ ತಿಳಿಸಿದರು.
ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

ನಮ್ಮ ದೈನಂದಿನ ಜೀವನದ ಕೆಲಸಗಳ ಜೊತೆಗೆ ಸೃಜನಾತ್ಮಕವಾಗಿ ಹೊಸ ವಿಷಯಗಳನ್ನು ಕಲಿಯುತ್ತಿರಬೇಕು. ಕೌಶಲ್ಯಕ್ಕೆ ಯಾವುದೇ ಕಾಲಮಿತಿಯಿಲ್ಲ. ಕಾಲಕ್ಕೆ ತಕ್ಕಂತೆ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಕೆಲಸ ಮಾಡಿದಾಗ ಕೌಶಲ್ಯ ವೃದ್ಧಿಯಾಗುತ್ತದೆ. ಇದು ನಮಗೆ ನಾವೇ ಕೊಟ್ಟುಕೊಳ್ಳುವ ದೊಡ್ಡ ಉಡುಗೊರೆ. ಇಂದಿನ ಯುವಸಮುದಾಯ ಕೇವಲ ಪದವೀಧರರಾದರೆ ಸಾಲದು, ಆಧುನಿಕ ತಂತ್ರಜ್ಞಾನ ಆಧಾರಿತ ಉದ್ಯೋಗಗಳಿಗೆ ಸಿದ್ಧರಾಗಬೇಕು ಎಂದು ಅವರು ಕರೆ ನೀಡಿದರು.

 

ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಿದ್ದರಾಮ ಬಿ. ಪಾಟೀಲ ಮಾತನಾಡಿ, ಜೀವನದಲ್ಲಿ ಏಳಿಗೆ ಸಾಧಿಸಲು ವೃತ್ತಿ ಕೌಶಲ್ಯಗಳ ಅಭಿವೃದ್ಧಿ ಮುಖ್ಯ. ಅರಿವಿನ ಕೌಶಲ್ಯಗಳು, ತಾಂತ್ರಿಕ ಕೌಶಲ್ಯಗಳು ಹಾಗೂ ಪರಸ್ಪರ ಸಂವಹನ ಕೌಶಲ್ಯಗಳನ್ನು ರೂಢಿಸಿಕೊಳ್ಳುವುದರಿಂದ ವೃತ್ತಿಯಲ್ಲಿ ದಕ್ಷತೆ ಮತ್ತು ನೈಪುಣ್ಯತೆಯನ್ನು ಸಾಧಿಸಬಹುದು ಎಂದು ಸಲಹೆ ನೀಡಿದರು.

 

ರುಡ್‍ಸೆಟ್ ಸಂಸ್ಥೆಯಿಂದ ತರಬೇತಿ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡು, ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಯುವ ಉದ್ಯಮಿಗಳಾದ ಅಭಿಷೇಕ್, ತಿಪ್ಪೇಸ್ವಾಮಿ, ಮಧುಕೇಶವ, ಇಂದುಪ್ರಸಾದ, ವರ್ಷಿಣಿ, ಶ್ವೇತಾ, ಉಮಾದೇವಿ ಮತ್ತು ಪಾರ್ವತಮ್ಮ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರಾದ ಬಸವರಾಜ್ ಅಶೋಕಪ್ಪ ಎಚ್.ಟಿ. ಮಾತನಾಡಿ, ಕೆಲಸದಲ್ಲಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವಂತೆ ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.

 

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ಜಯಲಕ್ಷ್ಮಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ. ಪ್ರವೀಣ್, ಎನ್‍ಆರ್‍ಎಲ್‍ಎಂ ಜಿಲ್ಲಾ ವ್ಯವಸ್ಥಾಪಕ ಯೋಗೇಶ್ವರಪ್ಪ ಉಪಸ್ಥಿತರಿದ್ದರು. ರುಡ್‍ಸೆಟ್ ಸಂಸ್ಥೆಯ ಉಪನ್ಯಾಸಕ ತೋಟಪ್ಪ ಎಸ್. ಗಾಣಿಗೇರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಮೊಬೈಲ್ ರಿಪೇರಿ ಮತ್ತು ಮೋಟಾರ್ ರಿವೈಂಡಿಂಗ್ ತರಬೇತಿಯ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now