ಬೆಂಗಳೂರು: ಸಚಿವ ಕೆಜೆ ಜಾರ್ಜ್ ಅವರಿಗೆ ಸದ್ಯ ಸ್ಮಾರ್ಟ್ ಮೀಟರ್ ಕೇಸ್ ನಿಂದ ರಿಲ್ಯಾಕ್ಸ್ ಸಿಕ್ಕಂತೆ ಆಗಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ, ಬಿಜೆಪಿ ನಾಯಕರು ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂಧನ ಸಷಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು.
ದೂರಿನ ಅನ್ವಯ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ನಡೆದಿದೆಯೇ ಇಲ್ಲವೇ ಎಂಬ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ಈ ಆದೇಶವನ್ನು ಪ್ರಶ್ನಿಸಿ ಇಂಧನ ಸಚಿವ ಕೆಜೆ ಜಾರ್ಜ್ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಸಂಬಂಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ತಮ್ಮ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಖಾಸಗಿ ದೂರು ರದ್ದುಪಡಿಸಬೇಕೆಂದು ಹೈಕೋರ್ಟ್ ಗೆ ತಾವೂ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. ಇಂಧನ ಸಚಿವ ಕೆ.ಜೆ.ಜಾರ್ಜ್ ಸಲ್ಲಿಸಿದ್ದ ಅರ್ಜಿಯನ್ನು ಜಸ್ಟೀಸ್ ಎಂ.ಐ.ಅರುಣ್ ಅವರ ಪೀಠ ವಿಚಾರಣೆ ನಡೆಸಿ ಇಂದು ಆದೇಶ ಪ್ರಕಟಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆಯ ಟೆಂಡರ್ ನಲ್ಲಿ ಆಕ್ರಮ ನಡೆದಿರುವುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕೋರ್ಟ್ ಮೊರೆ ಹೋಗಿದ್ದ ಬಿಜೆಪಿ ನಾಯಕರಿಗೆ ಹಿನ್ನಡೆಯಾದಂತೆ ಆಗಿದೆ. ಕೇಸ್ ರದ್ದಾದ ಖುಷಿಯಲ್ಲಿ ಸಚಿವ ಕೆಜೆ ಜಾರ್ಜ್ ಇದ್ದಾರೆ.
