Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೀಘ್ರ ಜಿಲ್ಲೆಯ 33 ರೈಲ್ವೆ ಸೇತುವೆ ಕಾಮಗಾರಿ ಪೂರ್ಣ ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆ

---Advertisement---

 ಚಿತ್ರದುರ್ಗ, ಆ.30: ಚಿತ್ರದುರ್ಗ ಜಿಲ್ಲೆಯ ಸವಾರ್ಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಟ್ಟು 33 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳನ್ನು ಮುಂದಿನ 8 ರಿಂದ 9 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಮುಗಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ನಗರದ ರೈಲ್ವೇ ನಿಲ್ದಾಣದ ಹತ್ತಿರದ ಲೆವೆಲ್ ಕ್ರಾಸಿಂಗ್ ಸಂಖ್ಯೆ 22 ಬದಲಾಗಿ ನಿರ್ಮಿಸಲಾಗುತ್ತಿರುವ ನೂತನ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಜಾಲದ ಅಭಿವೃದ್ಧಿ ಬೆನ್ನೆಲುಬಾಗಿವೆ. ವಿಶ್ವದ ಭೂಪಟದಲ್ಲಿ ಭಾರತವನ್ನು ಮುಂಚೂಣಿಯಲ್ಲಿ ನಿಲ್ಲಿಸಲು ಸಾರಿಗೆ ಮೂಲಸೌಕರ್ಯಗಳಿಗೆ ಅತ್ಯಂತ ಹೆಚ್ಛಿನ ಆದ್ಯತೆ ನೀಡಲಾಗುತ್ತಿದೆ. ದೇಶಾದ್ಯಂತ ರೈಲ್ವೆ ವಿದ್ಯುದ್ದೀಕರಣ ಶೇ.99ರಷ್ಟು ಪೂರ್ಣಗೊಂಡಿದ್ದು, ಈ ವರ್ಷದ ಕೊನೆಯೊಳಗೆ ಶೇ.100ರಷ್ಟು ಸಾಧಿಸಿ ವಿಶ್ವ ದಾಖಲೆ ಬರೆಯಲಾಗುವುದು. ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಕಾರ್ಯ 2 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಡಿಸೆಂಬರ್ ವೇಳೆಗೆ ಕರ್ನಾಟಕ ಶೇ.100ರಷ್ಟು ರೈಲ್ವೆ ವಿದ್ಯುದ್ದೀಕರಣ ಸಾಧಿಸಿದ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾಣ್ಯದ ಎರಡು ಮುಖಗಳಿದ್ದಂತೆ. ಎರಡೂ ಸರ್ಕಾರಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಸಂಸದರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಮನವಿಗೆ ಸ್ಪಂದಿಸಿ ಪ್ರಮುಖ ಸೇತುವೆಗಳು, ಎಲ್‍ಸಿ ಗೇಟ್‍ಗಳ ಮೇಲ್ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ಕರ್ನಾಟಕದ ರೈಲ್ವೆ ಯೋಜನೆಗಳಿಗಾಗಿ ರೂ. 52,000 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. ಹೊಸ ರೈಲ್ವೇ ಯೋಜನೆಗಳಿಗೆ ರೂ.15,000 ಕೋಟಿ ನೀಡಲಾಗಿದೆ. ಗದಗ-ವಾಡಿ, ಗಿಣಿಗೆರಾ-ರಾಯಚೂರು, ಶಿವಮೊಗ್ಗ-ರಾಣೆಬೆನ್ನೂರು, ಕಡೂರು-ಚಿಕ್ಕಮಗಳೂರು-ಬೇಲೂರು ಹಾಗೂ ಆಲಮಟ್ಟಿ-ಯಾದಗಿರಿ ರೈಲ್ವೆ ಮಾರ್ಗಗಳ ಕಾಮಗಾರಿಗಳು ಭರದಿಂದ ಸಾಗಿವೆ. ಚಿಕ್ಕಜಾಜೂರು-ಬಳ್ಳಾರಿ ಡಬ್ಲಿಂಗ್ ಯೋಜನೆಗೆ ರೂ. 3,340 ಕೋಟಿ ಮಂಜೂರು ಮಾಡಲಾಗಿದೆ. ಹಿಂದೆ ರಾಜ್ಯದ ರೈಲ್ವೆ ಯೋಜನೆಗಳಿಗೆ ವಾರ್ಷಿಕ ರೂ.380 ರಿಂದ ರೂ.400 ಕೋಟಿ ನೀಡಲಾಗುತ್ತಿತ್ತು. ಆದರೆ, ಈಗ ಪ್ರತಿ ವರ್ಷ ರೂ.7,500 ರಿಂದ ರೂ. 8,000 ಕೋಟಿ ಅನುದಾನ ನೀಡಲಾಗುತ್ತಿದೆ. ರಾಜ್ಯದ ಸುಮಾರು 62 ರೈಲ್ವೆ ಸ್ಟೇಷನ್‍ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

 

ಈಲ್ಲೆಯ ಬಹುವರ್ಷಗಳ ಕನಸಿನ ಯೋಜನೆಯಾದ ತುಮಕೂರು – ಚಿತ್ರದುರ್ಗ – ದಾವಣಗೆರೆ ನೂತನ ನೇರ ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಶೇ. 92 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಬಾಕಿ ಇರುವ ಶೇ.8 ರಷ್ಟು ಜಮೀನನ್ನು ಜಿಲ್ಲಾಡಳಿತ ಶೀಘ್ರವೇ ಹಸ್ತಾಂತರಿಸಿದರೆ, ಮುಂದಿನ ಒಂದೂವರೆ ವರ್ಷದಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಇದಲ್ಲದೆ ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ಚಿತ್ರದುರ್ಗ ಹಾಗೂ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲಾಗುತ್ತಿದೆ. ತುಮಕೂರು – ರಾಯದುರ್ಗ ಹಾಗೂ ಚಿತ್ರದುರ್ಗ ಭಾಗದ ಪ್ರಮುಖ ರೈಲು ಮಾರ್ಗಗಳ ಕಾಮಗಾರಿಗಳನ್ನು ವೇಗಗೊಳಿಸಲಾಗಿದ್ದು, 2027ರ ಡಿಸೆಂಬರ್ ಅಂತ್ಯದ ವೇಳೆಗೆ ಯೋಜನೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

ಗುಣಮಟ್ಟದ ಕಾಮಗಾರಿಗೆ ಸೂಚನೆ:
ಸ್ಥಳೀಯ ಶಾಸಕರು ಗುಣಮಟ್ಟದ ಕಾಮಗಾರಿ ಬಗ್ಗೆ ಗಮನ ಹರಿಸುವಂತೆ ಕೋರಿದ್ದಾರೆ. ಯಾವುದೇ ಕಾರಣಕ್ಕೂ ಮೇಲ್ಸೇತುವೆ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿಯಾಗಬಾರದು. ಮುಂದಿನ ಒಂದುವರೆ ವರ್ಷದ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಇದೇ ವೇಳೆ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳನ್ನು ಬರಪೀಡತ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದರು.

ಸಂಸದ ಗೋವಿಂದ ಎಂ ಕಾರಜೋಳ ಮಾತನಾಡಿ, ಚಿತ್ರದುರ್ಗ ಹಾಗೂ ಚಿಕ್ಕಜಾಜೂರು ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿರುವುದರಿಂದ  25 ರಿಂದ 30 ವರ್ಷಗಳ ಸುದೀರ್ಘ ಸಂಚಾರ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ರಾಜ್ಯ ಸರ್ಕಾರ ಶೇ. 50ರಷ್ಟು ವೆಚ್ಚ ಹಂಚಿಕೆ ಮಾಡಬೇಕಾದ ಯೋಜನೆಗಳು ವಿಳಂಬವಾಗುವ ಸಾಧ್ಯತೆ ಹೆಚ್ಚಿರುವುದರಿಂದ, ಈ ಯೋಜನೆಗೆ ಶೇಕಡಾ 100ರಷ್ಟು ಹಣವನ್ನು ಕೇಂದ್ರ ಸರ್ಕಾರವೇ ಭರಿಸಿದೆ.
ಹರಿಯಾಣದಲ್ಲಿ ಹೈಡ್ರೋಜನ್ ರೈಲಿಗೆ ಚಾಲನೆ ನೀಡಲಾಗಿದ್ದು, ಬುಲೆಟ್ ಟ್ರೇನ್ ಯೋಜನೆ ಕಾರ್ಯವೂ ಅತ್ಯಂತ ವೇಗದಲ್ಲಿ ಸಾಗುತ್ತಿದೆ. ಅಲ್ಲದೆ, ದೇಶದಲ್ಲಿದ್ದ ಸುಮಾರು 9,000 ಮಾನವರಹಿತ ಲೆವೆಲ್ ಕ್ರಾಸಿಂಗ್‍ಗಳನ್ನು ನಿರ್ಮಾಣ ಮಾಡಲಾಗಿದೆ. ರೈಲ್ವೇ ಮಾರ್ಗದ ವೇಗದಲ್ಲಿ ಕಾಮಗಾರಿ ವೇಗ ದೊರೆತಿದ್ದು, ದೇಶದಲ್ಲಿ ಪ್ರತಿದಿನ ಸರಾಸರಿ 8.5 ರಿಂದ 8.7 ಕಿ.ಮೀ ನಷ್ಟು ರೈಲ್ವೇ ಮಾರ್ಗ ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರ ರೈಲ್ವೆ ಕ್ಷೇತ್ರಕ್ಕೆ ರೂ.2,62,000 ಕೋಟಿಗಳ ಬೃಹತ್ ಬಜೆಟ್ ಹಂಚಿಕೆ ಮಾಡಿದೆ ಎಂದು ತಿಳಿಸಿದರು.

ಹೊಸದುರ್ಗದಲ್ಲಿ ವಿಶ್ವಮಾನವ ಎಕ್ಸ್‍ಪ್ರೆಸ್, ಚಾಲುಕ್ಯ ಎಕ್ಸ್‍ಪ್ರೆಸ್‍ಗಳ  ರೈಲುಗಳ ನಿಲುಗಡೆ, ಹೊಳಲ್ಕೆರೆಯಲ್ಲಿ ಸಿದ್ಧಗಂಗಾ ಎಕ್ಸ್‍ಪ್ರೆಸ್‍ಗೆ ಹಾಗೂ ಚಿಕ್ಕಜಾಜೂರಿನಲ್ಲಿ ಯಶವಂತಪುರ ರಾಣಿ ಚನ್ನಮ್ಮ ಸಂಪರ್ಕ ಕ್ರಾಂತಿ ಎಕ್ಸ್‍ಪ್ರೆಸ್ ರೈಲಿಗೆ ನಿಲುಗಡೆ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಸಂಸದ ಗೋವಿಂದ ಎಂ ಕಾರಜೋಳ ಮನವಿ ಮಾಡಿದರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ನಗರದ ರೈಲ್ವೆ ಲೆವೆಲ್ ಕ್ರಾಸಿಂಗ್ ಸಂಖ್ಯೆ 22ರ ಬದಲಾಗಿ ನೂತನವಾಗಿ ನಿರ್ಮಿಸಲಾಗುತ್ತಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾರ್ಯದಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ರಾಜಿ ಇರಬಾರದು. ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಯವರು ಅತ್ಯುನ್ನತ ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ವೇದಿಕೆ ಮೂಲಕ ಮನವಿ ಮಾಡಿದರು.

 

ಕ್ಷೇತ್ರದಲ್ಲಿ ಇದುವರೆಗೂ ನಿರ್ಮಿಸಲಾದ ಕೆಳಸೇತುವೆಗಳು ಕಳಪೆ ಮಟ್ಟದಿಂದ ಕೂಡಿದ್ದವು. ಪ್ರತಿ ಬಾರಿಯೂ ಅವುಗಳನ್ನು ದುರಸ್ತಿ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಲೋಪಗಳು ಮತ್ತೆ ಮರುಕಳಿಸಬಾರದು ಎಂದು ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜೀಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಮಾಜಿ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಹೆಚ್ಚುವರಿ ರೈಲ್ವೇ ವಿಭಾಗೀಯ ಅಧಿಕಾರಿ ಶಬ್ಬಾಸ್ ಅಹ್ಮದ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now