ಕಾಲೇಜುಗಳಲ್ಲಿ ಯುವನಿಧಿ ನೊಂದಣಿಗೆ ವಿಶೇಷ ಅಭಿಯಾನ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

2 Min Read

 

ಚಿತ್ರದುರ್ಗ. ಜ.05: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ಅಭಿಯಾನ ಆಯೋಜಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳನ್ನು  ಯುವನಿಧಿ ಯೋಜನೆಗೆ ನೋಂದಣಿ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಯುವನಿಧಿ ಯೋಜನೆ ಕುರಿತು ಜಿಲ್ಲೆಯ ತಹಶೀಲ್ದಾರರು ಹಾಗೂ ಜಿಲ್ಲೆಯ ಎಲ್ಲಾ ಪದವಿ, ಡಿಪ್ಲೊಮಾ ಕಾಲೇಜು ಪ್ರಾಂಶುಪಾಲರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ  ಮಾಡಿ, 2023 ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿನ ಅಥವಾ 6 ತಿಂಗಳ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಪದವೀಧರರಿಗೆ ರೂ. 3.000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1.500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುವುದು. ಈ ಹಿನ್ನಲೆಯಲ್ಲಿ ಈ ಯೋಜನೆಗೆ ಅರ್ಹ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಲು, ಯುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಕಾಲೇಜುಗಳು ಪ್ರಾಂಶುಪಾಲರು ನೋಂದಣಿಗಾಗಿ ವಿಶೇಷ ಅಭಿಯಾನ ನಡೆಸಿ, ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದ ಅವರು, ನೋಂದಣಿ ಅಭಿಯಾನಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಸಲಹೆ ನೀಡಿದ ಅವರು, ವಿಶೇಷ ನೋಂದಣಿ ಅಭಿಯಾನಕ್ಕೆ ಕರ್ನಾಟಕ ಒನ್ ಸಿಬ್ಬಂದಿಯನ್ನು ನಿಯೋಜಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಜ.12ರಂದು ಯುವನಿಧಿ ಯೋಜನೆಗೆ ಚಾಲನೆ: ಯುವನಿಧಿ ಕಾರ್ಯಕ್ರಮದಡಿ ನಿರುದ್ಯೋಗ ಭತ್ಯೆಯ ವಿತರಣಾ ಸಮಾರಂಭವನ್ನು ಇದೇ ಜನವರಿ 12ರಂದು ರಾಜ್ಯದ ಮುಖ್ಯಮಂತ್ರಿಗಳು  ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದು, ಈ ಸಮಾರಂಭಕ್ಕೆ ಚಿತ್ರದುರ್ಗ ಜಿಲ್ಲೆಯಿಂದ 5 ಸಾವಿರ ಫಲಾನುಭವಿಗಳನ್ನು ಕಳುಹಿಸಿಕೊಡಲಾಗುತ್ತದೆ. ಹಾಗಾಗಿ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ನೋಂದಣಿ ಆಗಬೇಕು. ಯುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ರಿಜಿಸ್ಟ್ರಾರ್ ಸರೋಜಾ ಮಾತನಾಡಿ, ದಾವಣಗೆರೆ ವಿಶ್ವವಿದ್ಯಾನಿಲಯದ ಅಂತಿಮ ಪದವಿ ವಿದ್ಯಾರ್ಥಿಗಳ ವಿವರವನ್ನು ನ್ಯಾಡ್‍ಗೆ ಅಪ್‍ಲೋಡ್ ಮಾಡಲಾಗಿದ್ದು, ನ್ಯಾಡ್‍ಗೆ ಸಂಬಂಧಿಸಿದ ಸಮಸ್ಯೆಗಳು ಇದ್ದಲ್ಲಿ ಸಮಸ್ಯೆ ಪರಿಹರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ, ದಾವಣಗೆರೆ ವಿಶ್ವವಿದ್ಯಾಲಯ ನ್ಯಾಡ್ ನೋಡಲ್ ಅಧಿಕಾರಿ ಪ್ರೊ.ಅನುಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲೆಯ ತಹಶೀಲ್ದಾರ್‍ಗಳು, ಜಿಲ್ಲೆಯ ಪದವಿ ಕಾಲೇಜುಗಳ ಹಾಗೂ ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *