ಚಿತ್ರದುರ್ಗ. ಏ.15: ಕ್ರೀಡೆಯಿಂದ ಮನಸ್ಸಿಗೆ ಉಲ್ಲಾಸ ದೊರೆಯಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ರೀಡೆ ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸಲಿದೆ. ಎಲ್ಲಿ ಕ್ರೀಡೆ ಇದೆಯೋ ಅಲ್ಲಿ ಆರೋಗ್ಯವೂ ಇದೆ. ಸರ್ಕಾರಿ ನೌಕರರು ತಮ್ಮ ದೈನಂದಿನ ಒತ್ತಡದ ಕೆಲಸದ ಮಧ್ಯೆಯೂ ಸಹ ಕ್ರೀಡೆಯಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷದ ವಿಚಾರ. ಕ್ರೀಡೆಯಲ್ಲಿ ಸೋಲು-ಗೆಲವು ಸಹಜ. ಇದಕ್ಕಿಂತ ಮುಖ್ಯವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಬಹಳ ಮುಖ್ಯ ಎಂದ ಸಚಿವರು, ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡು ದಿನಗಳ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದಜ್ಜಿ ಸೇರಿದಂತೆ ಮತ್ತಿತರರು ಇದ್ದರು. ಇದೇ ವೇಳೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಖುದ್ದು, ಶಾಟ್ ಪುಟ್ ಎಸೆತದಲ್ಲಿ ಪಾಲ್ಗೊಂಡು, ಸರ್ಕಾರಿ ನೌಕರರನ್ನು ಹುರಿದುಂಬಿಸಿದರು.

