ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಶೇ.100ರಷ್ಟು ಮಕ್ಕಳು ಪರೀಕ್ಷೆ ಹಾಜರಾಗುವಂತೆ ಕ್ರಿಯಾಯೋಜನೆ ರೂಪಿಸಿ : ಕೆ.ನಾಗಣ್ಣ ಗೌಡ

2 Min Read

ಚಿತ್ರದುರ್ಗ. ಏ.03: ಮುಂಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರಲ್ಲಿ ಶೇ.100ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗುವಂತೆ ಕ್ರಿಯಾಯೋಜನೆ ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಬುಧವಾರ ಸಮಾಜ ಕಲ್ಯಾಣ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಪ್ರಸ್ತುತ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರಲ್ಲಿ ಎಷ್ಟು ಮಕ್ಕಳು ಗೈರಾಗಿದ್ದಾರೆ? ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗದಿದ್ದರೆ ಹೇಗೆ? ಎಸ್‍ಎಸ್‍ಎಲ್‍ಸಿ ಪರೀಕ್ಷೆ ಉತ್ತೀರ್ಣರಾಗದಿದ್ದರೆ ಮುಂದಿನ ಆ ಮಕ್ಕಳ ಭವಿಷ್ಯದ ಗತಿ ಏನು? ಎಂದು ಪ್ರಶ್ನಿಸಿದ ಅವರು, ಮಕ್ಕಳು ಶಾಲೆಯಲ್ಲಿ ಇದ್ದರೆ ಸುರಕ್ಷಿತವಾಗಿರುತ್ತಾರೆ. ಶಾಲೆಯಿಂದ ಹೊರಗುಳಿದರೆ ಬಾಲ್ಯವಿವಾಹ, ಬಾಲಕಾರ್ಮಿಕ ಸೇರಿದಂತೆ ಹಲವಾರು ಸಮಸ್ಯೆಗಳು ಎದುರಾಗಲಿವೆ. ಹಾಗಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮಕ್ಕಳು ಗೈರು ಹಾಜರಾಗದಂತೆ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಶಾಲೆಯ ಮುಖ್ಯ ಶಿಕ್ಷಕರಿಗೆ ಜವಾಬ್ದಾರಿಗಳನ್ನು ನಿಗಧಿಪಡಿಸಿ, ಶೇ.100ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.

 

ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಹಾಜರಾತಿ ಕೊಡಬಾರದು. ಇದರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಸಮರ್ಪಕವಾಗಿ ಸಿಗುವುದಿಲ್ಲ. ಈ ಕುರಿತು ಕಾಲಕಾಲಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಾತಿ ಪರಿಶೀಲನೆ ನಡೆಸಿ, ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.

 

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಕಲಿಕೆಯ ಸಮಸ್ಯೆ ಇದ್ದು, ಬಹುತೇಕ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮಾತನಾಡಲಿಕ್ಕೆ ಬರುವುದೇ ಇಲ್ಲ. ಹಾಗಾಗಿ 3 ರಿಂದ 6 ತಿಂಗಳವರೆಗೆ  ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕೋರ್ಸ್ ಪ್ರಾರಂಭಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ತರಬೇತಿ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

 

ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಎಲ್ಲ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ತುರ್ತು ಸೇವೆ 112 ಸಂಖ್ಯೆಯನ್ನು ಬರೆಸಬೇಕು. ಶಾಲೆ, ವಸತಿ ನಿಲಯ, ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಹಾಗೂ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್  ಮಾತನಾಡಿ, ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿಗಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ವಿಶೇಷ ಆಂದೋಲನಾ ನಡೆಸಿ, ಮುಖ್ಯವಾಹಿನಿಗೆ ತರಲು ಅಗತ್ಯ ಕ್ರಮವಹಿಸಲಾಗುವುದು. ಗೈರು ಹಾಜರಾತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳ ತಂಡ ರಚಿಸಿ, ಪರಿಶೀಲನೆ ನಡೆಸಿ, ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ದಿವಾಕರ್ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.

Share This Article
Leave a Comment

Leave a Reply

Your email address will not be published. Required fields are marked *