Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು: 12ರಿಂದ 15 ಹೊಸ ಮುಖಗಳಿಗೆ ಮಣೆ?

---Advertisement---

ಬೆಂಗಳೂರು.ಜುಲೈ.27: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಪ್ರಮುಖ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಿಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ರಾಜ್ಯ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಹಾಗೂ ಇತರ ಗಣ್ಯರು ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ನಾಯಕರಿಂದ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಸ್ವೀಕರಿಸಿ, ಅದನ್ನು ಪರಿಶೀಲಿಸಿದ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಿದ್ದಾರೆ ಎನ್ನಲಾಗಿದೆ.

ಖಾಲಿ ಇರುವ ಸಚಿವ ಸ್ಥಾನಗಳ ಪೈಕಿ ಸುಮಾರು 12 ರಿಂದ 15 ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ. ಮೊದಲ ಬಾರಿಗೆ ಗೆದ್ದವರಷ್ಟೇ ಅಲ್ಲದೆ, 3ಕ್ಕಿಂತ ಹೆಚ್ಚು ಬಾರಿ ಗೆದ್ದು ಅನುಭವ ಹೊಂದಿರುವ ಶಾಸಕರನ್ನೂ ಪರಿಗಣಿಸುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

ಜಾತಿವಾರು, ಪ್ರಾದೇಶಿಕ ಪ್ರಾತಿನಿಧ್ಯ, ಶಿಕ್ಷಣ ಹಾಗೂ ಅನುಭವವನ್ನು ಮಾನದಂಡವಾಗಿಟ್ಟುಕೊಂಡು ಪಟ್ಟಿ ಸಿದ್ಧಪಡಿಸಲಾಗಿದೆ. ರಾಹುಲ್ ಗಾಂಧಿ ಅವರು 55 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವ ಇರಾದೆ ಹೊಂದಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಸುಮಾರು 30 ರಿಂದ 35ಕ್ಕೂ ಹೆಚ್ಚು ಶಾಸಕರು ಈಗಾಗಲೇ ದೆಹಲಿಗೆ ತಲುಪಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಎಐಸಿಸಿ ನಾಯಕರ ಜೊತೆ ಮಾತುಕತೆ ಪೂರ್ಣಗೊಂಡ ನಂತರ ಸಂಪುಟ ವಿಸ್ತರಣೆಯ ಮುಹೂರ್ತ ಹಾಗೂ ಅಂತಿಮ ಪಟ್ಟಿ ಅಧಿಕೃತವಾಗಿ ಹೊರಬೀಳುವ ನಿರೀಕ್ಷೆಯಿದೆ.

Join WhatsApp

Join Now

Join Telegram

Join Now