ಬೆಂಗಳೂರು.ಜೂನ್.29: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 2 ರವರೆಗೆ ಈ ಭಾಗದ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 30ರಂದು ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿರಲಿದೆ.
ಇನ್ನು ಜುಲೈ 1 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 2ರಂದೂ ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.









