ಚಿತ್ರದುರ್ಗ, ಸೆ.27 : ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಈಗಾಗಲೆ ಸೆ. 22 ರಿಂದ ಆರಂಭವಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಗೈರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವು ಸರ್ಕಾರಿ ಕೆಲಸವಾಗಿದ್ದು, ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಈ ಕುರಿತಂತೆ ಸಮೀಕ್ಷೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಗಣತಿದಾರರು, ಮೇಲ್ವಿಚಾರಕರು ಸೇರಿದಂತೆ ಎಲ್ಲ ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಆದರೆ ಕೆಲವು ಗಣತಿದಾರರು ಸಮೀಕ್ಷಾ ಕಾರ್ಯದಲ್ಲಿ ಗೈರು ಹಾಜರಾಗುವುದು, ತಮಗೆ ವಹಿಸಿರುವ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷö್ಯ ತೋರುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಇಂತಹ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು.
ರಾಜ್ಯದ ಮುಖ್ಯಮಂತ್ರಿಗಳು ಕೂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು, ಗೈರು ಮತ್ತು ನಿರ್ಲಕ್ಷö್ಯ ತೋರುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಶುಕ್ರವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಗಣತಿದಾರರು ತಮಗೆ ವಹಿಸಿರುವ ಕರ್ತವ್ಯ ಮತ್ತು ಗುರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಒಂದು ವೇಳೆ ಇಲ್ಲಸಲ್ಲದ ನೆಪವೊಡ್ಡಿ, ಗೈರು ಹಾಜರಾದಲ್ಲಿ ಅಥವಾ ನಿರ್ಲಕ್ಷ್ಯ ತೋರಿದಲ್ಲಿ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಎಚ್ಚರಿಕೆ ನೀಡಿದ್ದಾರೆ.






