ದೆಹಲಿ. ಸೆಪ್ಟೆಂಬರ್. 29: ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವಹಿವಾಟುಗಳ ಮೇಲೆ ಶುಲ್ಕ ವಿಧಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ನಿಯಮಕ್ಕೆ ತಡೆ ನೀಡಲು ನಿರಾಕರಿಸಿದೆ.
ಇದೇ ವೇಳೆ, ಈ ಸಂಬಂಧ ವಿವರಣೆ ನೀಡುವಂತೆ ಕೇಂದ್ರ ಸರ್ಕಾರ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹಾಗೂ ಭಾರತೀಯ ರಾಷ್ಟ್ರೀಯ ಪಾವತಿ ನಿಗಮಕ್ಕೆ (ಎನ್‌ಪಿಸಿಐ) ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ವಕೀಲ ಅಂಜನ್ ದತ್ತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿದೆ. ಎರಡು ಸಾವಿರ ರೂಪಾಯಿಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಿಧಿಸಲು ನಿರ್ಧರಿಸಿದ್ದೇಕೆ ಎಂಬುದರ ಕುರಿತು ಸಮಗ್ರ ವಿವರಗಳನ್ನೊಳಗೊಂಡ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಸೆಪ್ಟೆಂಬರ್ 16 ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದು, ಎರಡು ಸಾವಿರಕ್ಕಿಂತ ಹೆಚ್ಚಿನ ಮೊತ್ತದ ಪಾವತಿಗೆ ಶೇಕಡಾ 0.4 ರಷ್ಟು ಎಂಡಿಆರ್ ವಿಧಿಸಿರುವುದು ಸಂವಿಧಾನಬದ್ಧ ಸಮಾನತೆಯ ಹಕ್ಕು ಮತ್ತು ವ್ಯಾಪಾರ ಮಾಡುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ವಹಿವಾಟುಗಳ ನಿರ್ವಹಣೆಗೆ ವೆಚ್ಚ ತಗುಲುವಂತೆಯೇ ಯುಪಿಐ ವ್ಯವಸ್ಥೆಗೂ ನಿರ್ವಹಣಾ ವೆಚ್ಚವಿರುತ್ತದೆ ಎಂದು ಸ್ಪಷ್ಟಪಡಿಸಿದರು. ಬ್ಯಾಂಕುಗಳು ಸೇರಿದಂತೆ ಎರಡು ಪ್ರಮುಖ ನಿರ್ವಾಹಕರು ಈ ಸೇವೆಯನ್ನು ಒದಗಿಸುತ್ತಿದ್ದು, ಇದು ಭಾರತ ಸರ್ಕಾರ ವಿಧಿಸುತ್ತಿರುವ ಯಾವುದೇ ಶಾಸನಬದ್ಧ ತೆರಿಗೆಯಲ್ಲ ಎಂದು ಸಮರ್ಥಿಸಿಕೊಂಡರು. ಇದು ವಹಿವಾಟು ನಡೆಸುವ ಸಂಸ್ಥೆಗಳ ನಡುವಿನ ಇತ್ಯರ್ಥ ಶುಲ್ಕವಾಗಿದ್ದು, ಇದನ್ನು ಎನ್‌ಪಿಸಿಐ ಸುಗಮಗೊಳಿಸುತ್ತದೆ ಹಾಗೂ ಇದರಲ್ಲಿ ಸರ್ಕಾರವು ಯಾವುದೇ ಹಣವನ್ನು ಪಡೆಯುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು.











