ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಅಲೆಮಾರಿ, ಅರೆಅಲೆಮಾರಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ನೋಡಿ ಸಮೀಕ್ಷೆ ನಡೆಸಬೇಕು. ಅವಸರದಲ್ಲಿ ಸಮೀಕ್ಷೆ ನಡೆಸಿದರೆ ಸಾಮಾಜಿಕ ನ್ಯಾಯ ನೀಡಿದಂತಾಗುವುದಿಲ್ಲವೆಂದು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಕೆ.ರವೀಂದ್ರಶೆಟ್ಟಿ ಉಳಿದೊಟ್ಟು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜು.28 ರಿಂದ ಆ.2 ರವರೆಗೆ ಜನಾಂಗದ ಸಮೀಕ್ಷೆ ನಡೆಸಿದರೆ ಪರಿಪೂರ್ಣ ಮಾಹಿತಿ ಸಿಗುವುದಿಲ್ಲ. ಕನಿಷ್ಟ ಒಂದು ತಿಂಗಳಾದರೂ ಸಮೀಕ್ಷೆ ನಡೆಸಬೇಕು. ಅತ್ಯಂತ ಶೋಚನೀಯ ಸ್ಥಿತಿಯಲ್ಲಿರುವ ಅಲೆಮಾರಿ ಮತ್ತು ಅರೆಅಲೆಮಾರಿಗಳಲ್ಲಿ 46 ಜಾತಿಗಳಿವೆ. ಸಮಾಜದ ಮುಖ್ಯ ವಾಹಿನಿಗೆ ಬಂದು ಸ್ವಾಭಿಮಾನದ ಬದುಕು ನಡೆಸಬೇಕಾಗಿರುವುದರಿಂದ ಹಲವಾರು ಬಾರಿ ಪ್ರತಿಭಟನೆಗಳನ್ನು ನಡೆಸಿದ್ದೇವೆ. ಹಾಗಾಗಿ ರಾಜ್ಯದ ಪ್ರತಿ ಜಿಲ್ಲೆ, ತಾಲ್ಲೂಕು ಹೋಬಳಿ, ಗ್ರಾಮ ಮಟ್ಟಗಳಿಗೆ ಅಧಿಕಾರಿಗಳು ತೆರಳಿ ಸಮೀಕ್ಷೆ ನಡೆಸಬೇಕು ರಾಜ್ಯದಲ್ಲಿ 90 ಲಕ್ಷದಷ್ಟು ಜನಸಂಖ್ಯೆಯಿದೆ. ನಿಖರವಾಗಿ ಮಾಹಿತಿಯನ್ನು ರಾಜ್ಯ ಸರ್ಕಾರ ಪಡೆದುಕೊಳ್ಳಬೇಕು. ರಾಜ್ಯಾದ್ಯಂತ ಸಮಿತಿಗಳನ್ನು ರಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಬಲಪಡಿಸಿ ರಾಜ್ಯದ ಸೌಲಭ್ಯಗಳನ್ನು ಪಡೆಯುವುದು ನಮ್ಮ ಉದ್ದೇಶ ಎಂದು ಹೇಳಿದರು.
ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಓ.ಪ್ರತಾಪ್‍ಜೋಗಿ ಮಾತನಾಡಿ ಶಿಕ್ಷಣದಿಂದ ವಂಚಿತರಾಗಿರುವ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಯನ್ನು ಆಧರಿಸಿ ಸಮೀಕ್ಷೆ ನಡೆಸಬೇಕು. ಒಂದು ವಾರದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲು ಆಗುವುದಿಲ್ಲ. ತಂದೆ-ತಾಯಿ ಇಲ್ಲದ ಗೋಸಾಯಿ ಸಮುದಾಯದ ವಿದ್ಯಾರ್ಥಿಯೊಬ್ಬನಿಗೆ ಹೊಳಲ್ಕೆರೆಯಲ್ಲಿ ಅಲೆಮಾರಿ ಮತ್ತು ಅರೆಅಲೆಮಾರಿ ವಸತಿ ಶಾಲೆಯಲ್ಲಿ ಪ್ರವೇಶ ನೀಡುತ್ತಿಲ್ಲ. ಈ ಸಂಬಂಧ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆಂದು ಅಲೆಮಾರಿ ಜನಾಂಗದವರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತೋಡಿಕೊಂಡರು.
ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಲಕ್ಷ್ಮಿಕಾಂತ್, ಮಂಜುಳ, ರಾಮುಗೋಸಾಯಿ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.


