ಎಸ್‍ಎಸ್‍ಎಲ್‍ಸಿ, ಪಿಯು ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮ ರೂಪಿಸಿ : ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ

1 Min Read

ಚಿತ್ರದುರ್ಗ. ಜುಲೈ.02:  2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಣ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

2022-23ನೇ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, 2023-24ನೇ ಸಾಲಿನಲ್ಲಿ 21ನೇ ಸ್ಥಾನಕ್ಕೆ ಕುಸಿದಿದ್ದು, ಈ ಫಲಿತಾಂಶ ಕುಸಿತಕ್ಕೆ ಕಾರಣವೇನು ಎಂದು ಪ್ರಶ್ನೆ ಮಾಡಿದ ಅವರು, 2024-25 ನೇ ಸಾಲಿನಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಶಾಲಾ ಹಂತ, ಹೋಬಳಿ ಹಂತ, ತಾಲ್ಲೂಕು ಹಂತ ಮತ್ತು ಜಿಲ್ಲಾ ಹಂತಗಳಲ್ಲಿ ಫಲಿತಾಂಶ ವೃದ್ಧಿಗಾಗಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಮನಮುಟ್ಟುವ ಹಾಗೆ ಮಾರ್ಗದರ್ಶನ ನೀಡಿ. ಅದರಲ್ಲೂ ಶಾಲಾ ಹಂತದಲ್ಲಿ ವಿಷಯವಾರು ಶಿಕ್ಷಕರ ಮೇಲ್ವಿಚಾರಣೆ ನಡೆಸಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಎಲ್ಲಾ ಅಧಿಕಾರಿಗಳು ಮತ್ತು ಶಿಕ್ಷಕರು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಸಿರುದ್ದೀನ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪಮನಿರ್ದೇಶಕ ಪುಟ್ಟಸ್ವಾಮಿ ಸೇರಿದಂತೆ ಜಿಲ್ಲೆಯ ಆರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *