ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಏ.11) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಮತಗಟ್ಟೆಗಳಲ್ಲಿ ಈ ಬಾರಿ ಹೆಚ್ಚು ಮತದಾನವಾಗಲು ವಿಶೇಷ ಸ್ವೀಪ್ ಚಟುವಟಿಕೆಗಳನ್ನು ಮಾಡುವ ಮೂಲಕ ಮತದಾನ ಪ್ರಮಾಣ ಹೆಚ್ಚಳವಾಗುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಉಪವಿಭಾಗಾಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ತಾಂತ್ರಿಕ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್‍ಗಳಿಗೆ ಚುನಾವಣಾ ನೀತಿ ಸಂಹಿತೆ ಪಾಲನೆ ಮತ್ತು ಶೇಕಡಾವಾರು ಮತದಾನದ ಪ್ರಮಾಣ ಹೆಚ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತಗಟ್ಟೆಗಳಲ್ಲಿ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳು ಇರುವಂತೆ ಕ್ರಮವಹಿಸಬೇಕು. ಮಾದರಿ ನೀತಿ ಸಂಹಿತೆಗೆ ಸಂಬಂಧಪಟ್ಟಂತೆ ಯಾವುದೇ ಬ್ಯಾನರ್, ಕಟೌಟ್‍ಗಳು ತೆರವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮಾದರಿ ನೀತಿ ಸಂಹಿತೆಯನ್ನು ಪಾಲಿಸುವಂತೆ ನಿಗಾವಹಿಸುವ ಸಂಪೂರ್ಣ ಜವಾಬ್ದಾರಿ ಆಯಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳದ್ದಾಗಿರುತ್ತದೆ ಎಂದರು.
ಯಾವುದಾದರೂ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಮಾಹಿತಿ ನೀಡಬೇಕು. ಸಾರ್ವಜನಿಕರಿಗೆ ಸಿ-ವಿಜಿಲ್ ಆ್ಯಪ್ ಬಗ್ಗೆ ಮಾಹಿತಿ ನೀಡಿ ಈ ಮಾಹಿತಿಯಂತೆ ದೂರನ್ನು ಪರಿಶೀಲಿಸಿ ಕ್ರಮವಹಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಕ್‍ಪೋಸ್ಟ್‍ಗಳಿಗೆ ಆಗಾಗ್ಗೆ ಭೇಟಿ ನೀಡಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲ್ಲೂಕು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹೆಚ್.ಹನುಮಂತಪ್ಪ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಆರ್.ಚೈತ್ರಾ, ಪಿ.ಟಿ.ಧನಂಜಯ ಸೇರಿದಂತೆ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ತಾಂತ್ರಿಕ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್‍ಗಳು ಇದ್ದರು.