ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 27 : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮಾರಂಭ, ಸಂಘದ ಸುವರ್ಣ ಮಹೋತ್ಸವ ಹಾಗೂ ಗುರುವಂದನಾ ಸಮಾರಂಭ ಫೆ.28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮ್ಮೇಳನ ಉದ್ಘಾಟಿಸಲಿದ್ದಾರೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಪ್ರಾಥಮಿಕ ಶಾಲಾ ಸಹ ಶಿಕ್ಷಕ ಹುದ್ದೆಯಿಂದ ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ನೀಡುವುದು. ವೇಳಾಪಟ್ಟಿ ಪ್ರಕಟಿಸಿ ಕೌನ್ಸಿಲಿಂಗ್ ನಡೆಸುವುದು, ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರವನ್ನು ಒತ್ತಾಯಿಸುವುದು ಸೇರಿದಂತೆ ಕೆಎಎಸ್‍ಎಸ್.ಯೋಜನೆಯಿಂದ ಆಗುತ್ತಿರುವ ತೊಂದರೆಗಳ ನಿವಾರಣೆ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದಲ್ಲದೆ ಅನೇಕ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗುವುದು.
ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬಸ್‍ಗಳ ವ್ಯವಸ್ಥೆ ಕಲ್ಪಿಸಿದ್ದು, ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಸಂಘದ ಪದಾಧಿಕಾರಿಗಳು ಬೆಳಿಗ್ಗೆ ಐದು ಗಂಟೆಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಂದು ಸೇರುವಂತೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಬಿ.ಮಹಾಂತೇಶ್ ಹಾಗೂ ತಾಲ್ಲೂಕು ಅಧ್ಯಕ್ಷ ಎಸ್.ಕೆಂಚಪ್ಪ ಇವರುಗಳು ಮನವಿ ಮಾಡಿದ್ದಾರೆ.



