ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ನಡುವಿನ ‘ಕುರ್ಚಿ ಕದನ’ದಿಂದ ಕರ್ನಾಟಕದ ಆಡಳಿತವೇ ಅಸ್ತವ್ಯಸ್ತಗೊಂಡಿದೆ ಎಂದು ಟೀಕಿಸಿದರು.ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಧಿಕಾರ ಉಳಿಸಿಕೊಳ್ಳುವ ರಾಜಕಾರಣವೇ ಹೆಚ್ಚು ನಡೆಯುತ್ತಿದೆ. ಸರ್ಕಾರದ ನಾಯಕರು ಪರಸ್ಪರ ಪೈಪೋಟಿ ಮತ್ತು ಒಳಜಗಳದಲ್ಲಿ ನಿರತರಾಗಿದ್ದು, ಇದರ ಪರಿಣಾಮ ಜನಸಾಮಾನ್ಯರ ಮೇಲೆ ಬೀಳುತ್ತಿದೆ ಎಂದು ಮೋದಿ ಆರೋಪಿಸಿದರು. ಬೆಂಗಳೂರಿನಂತಹ ಮಹಾನಗರದ ಮೂಲಸೌಕರ್ಯ ಸಮಸ್ಯೆಗಳೂ ಸರ್ಕಾರದ ನಿರ್ಲಕ್ಷ್ಯದಿಂದ ಹೆಚ್ಚಾಗಿವೆ ಎಂದು ಕಿಡಿಕಾರಿದರು.
ರಾಜ್ಯದ ಖಜಾನೆ ಖಾಲಿಯಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲದಿದ್ದರೂ, ಜಾಹೀರಾತು ಮತ್ತು ರಾಜಕೀಯ ಲೆಕ್ಕಾಚಾರಗಳಿಗೆ ಅಪಾರ ವೆಚ್ಚ ಮಾಡಲಾಗುತ್ತಿದೆ ಎಂದು ಆರೋಪಿಸಿದ ಪ್ರಧಾನಿ, ವರ್ಗಾವಣೆ ಹಾಗೂ ಪೋಸ್ಟಿಂಗ್‌ಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಹೇಳಿದರು.“ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಸಮಸ್ಯೆಗಳೇ ಕಾಣಿಸುತ್ತವೆ” ಎಂದು ಹೇಳಿದ ಮೋದಿ, ಹಿಮಾಚಲ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ಸಮಸ್ಯೆ, ತೆಲಂಗಾಣದಲ್ಲಿ ರೈತರ ಆತ್ಮಹತ್ಯೆ, ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ಗೊಂದಲವನ್ನು ಉದಾಹರಣೆಯಾಗಿ ಉಲ್ಲೇಖಿಸಿದರು.

“ಕರ್ನಾಟಕದಲ್ಲೂ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ” ಎಂದು ವ್ಯಂಗ್ಯವಾಡಿದರು.ರಾಜಸ್ಥಾನದ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿದ ಮೋದಿ, ಕರ್ನಾಟಕದಲ್ಲೂ ಅದೇ ರೀತಿಯ ಆಂತರಿಕ ಸಂಘರ್ಷ ನಡೆಯುತ್ತಿದೆ ಎಂದು ಹೇಳಿದರು. ಜನರು ಸಮಸ್ಯೆಗಳಿಂದ ಬಳಲುತ್ತಿದ್ದರೆ, ಸರ್ಕಾರದ ನಾಯಕರು ಅಧಿಕಾರದ ಕಿತ್ತಾಟದಲ್ಲಿ ಮುಳುಗಿದ್ದಾರೆ ಎಂದು ಟೀಕಿಸಿದರು.

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಮೋದಿ, ಪಶ್ಚಿಮ ಬಂಗಾಳದ ಜನರು ಇತಿಹಾಸ ನಿರ್ಮಿಸಿದ್ದಾರೆ ಎಂದು ಹೇಳಿದರು. “ಇದು ಬಿಜೆಪಿಯ ಗೆಲುವಷ್ಟೇ ಅಲ್ಲ, ಪ್ರಜಾಪ್ರಭುತ್ವದ ಜಯ” ಎಂದು ಬಣ್ಣಿಸಿದರು. ಅಸ್ಸಾಂನಲ್ಲಿ ಸತತ ಎರಡನೇ ಬಾರಿ ಜನಾದೇಶ ದೊರೆತಿರುವುದು ನವ ಭಾರತದ ನಿರ್ಮಾಣಕ್ಕೆ ಸಿಕ್ಕ ಶಕ್ತಿ ಎಂದರು.“ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಸ್ತಿತ್ವವೇ ಇರಲಿಲ್ಲ. ಇಂದು 200ಕ್ಕೂ ಹೆಚ್ಚು ಸ್ಥಾನ ಗೆದ್ದು ಸರ್ಕಾರ ರಚಿಸಿದ್ದೇವೆ. ಕೇರಳದಲ್ಲೂ ಈಗ ಕಮಲ ಅರಳಲು ಆರಂಭವಾಗಿದೆ” ಎಂದು ಹೇಳಿ, ಮುಂದಿನ ದಿನಗಳಲ್ಲಿ ಕೇರಳದಲ್ಲೂ ಬಿಜೆಪಿ ಬಲಿಷ್ಠವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

















