ಬೆಂಗಳೂರು: ಉತ್ತರ ಕನ್ನಡ ಶಾಸಕರ ಒತ್ತಡಕ್ಕೆ ಮಣಿದ ಸರ್ಕಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ತಾತ್ವಿಕ ಒಪ್ಪಿಗೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಮತ್ತು ಸುಧಾಕರ್ ಶೀಘ್ರವೇ ಭೇಟಿ ನೀಡಲಿದ್ದಾರೆ. ಯಾವ ಭಾಗದಲ್ಲಿ ಆಸ್ಪತ್ರೆ ನಿರ್ಮಿಸಬೇಕೆಂದು ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಆಸ್ಪತ್ರೆ ನಿರ್ಮಾಣದ ಕುರಿತು ಸರ್ಕಾರದಿಂದ ಘೋಷಣೆ ಮಾಡಲಾಗುತ್ತದೆ. ಆರೋಗ್ಯ ಸಚಿವರ ನೇತೃತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂಬಂಧ ಮಾತನಾಡಿರುವ ಸಚಿವ, ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಕೋಟಾ ಶ್ರೀನಿವಾಸ ಪೂಜಾರಿ, ಕುಮುಟಾ ತಾಲೂಕಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಆಸ್ಪತ್ರೆ ನಿರ್ಮಾಣಕ್ಕೆ ಸಚಿವರು ಈಗಾಗಲೇ ಒಪ್ಪಿಗೆ ಸೂಚಿಸಿದ್ದಾರೆ. ಈಗಿರುವ ಮೆಡಿಕಲ್ ಕಾಲೇಜನ್ನು ಉನ್ನತ ದರ್ಜೆಗೆ ಏರಿಸಬೇಕು. ಅಧಿವೇಶನ ಮುಗಿದ ಒಂದು ವಾರದ ಒಳಗೆ ಭೇಟಿ ನೀಡಲಿದ್ದಾರೆ. ಶೀಘ್ರದಲ್ಲಿಯೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದಿದ್ದಾರೆ.