ಬೆಂಗಳೂರು: ಡ್ರಗ್ಸ್ ಹಾಗು ಬಿಟ್ ಕಾಯಿನ್ ಪ್ರಕರಣ ಗಂಭೀರವಾಗಿದ್ದು, ಈ ಪ್ರಕರಣದ ಬಗ್ಗೆ ಸಿಐಡಿ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಇಂದು ಅಧಿಕಾರಿಗಳ ಜತೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ತನಿಖೆ ನಡೆಯುತ್ತಿರುವುದರಿಂದ ನಾನು ಏನನ್ನೂ ಹೇಳುವುದಿಲ್ಲ. ಆದರೆ ಸಿಐಡಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ತಿಳಿಸಿದರು.
ಯಾರನ್ನೂ ರಕ್ಷಿಸುವ ಕೆಲಸ ಮಾಡುತ್ತಿಲ್ಲ. ಪ್ರಕರಣದ ಬಗ್ಗೆ ಊಹಾಪೋಹ ಹೇಳಿಕೆಗಳನ್ನು ನೀಡಬಾರದು. ಡ್ರಗ್ಸ್ ಖರೀದಿ ಮತ್ತು ಬಿಟ್ ಕಾಯಿನ್ ಬಳಕೆ ಆಗಿದ್ದರೂ, ಪೊಲೀಸರು ಆರೋಪಿಗಳನ್ನು ಬಂಧಿಸಲಿದ್ದಾರೆ. ಪೊಲೀಸರು ಭಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಭಾಗಿ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ಕೊಡಬಾರದು. ಅವರು ಮುಖ್ಯಮಂತ್ರಿಯಾಗಿದ್ದವರು. ಈ ರೀತಿ ಹೇಳಿಕೆ ನೀಡುವ ಬದಲಾಗಿ ಪೊಲೀಸರಿಗೆ ನೇರವಾಗಿ ಫೋನ್ ಮಾಡಿ ತಿಳಿಸಬಹುದಿತ್ತು. ಇದು ದೇಶದ ಆರ್ಥಿಕತೆಯ ವಿಚಾರ. ಪಕ್ಷ ಮೀರಿ ಯೋಚಿಸಬೇಕು ಎಂದು ಸಲಹೆ ನೀಡಿದರು