ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಮಾಣಪತ್ರ ಸ್ವೀಕರಿಸಿದ ಬಳಿಕ ಭಾವುಕವಾಗಿ ಪ್ರತಿಕ್ರಿಯಿಸಿದ್ದು, “ಇದು ನನ್ನ ಕೊನೆಯ ಪ್ರಮಾಣಪತ್ರ ಸ್ವೀಕಾರ ಆಗಿರಬಹುದು” ಎಂದು ಹೇಳಿದ್ದಾರೆ.ಶುಕ್ರವಾರ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, 13ನೇ ಬಾರಿಗೆ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
“ನನಗೆ ಈ ಮಟ್ಟದ ರಾಜಕೀಯ ಜೀವನ ನೀಡಿದ್ದು ಕಾಂಗ್ರೆಸ್ ಪಕ್ಷ. ಕಲಬುರಗಿ ಜಿಲ್ಲೆಯ ಜನತೆ, ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ನನಗೆ ನಿರಂತರ ಬೆಂಬಲ ನೀಡಿದ್ದಾರೆ. 1972ರಲ್ಲಿ ವಿಧಾನಸೌಧಕ್ಕೆ ಕಾಲಿಟ್ಟ ನಾನು ರಾಜಕೀಯ ಜೀವನದಲ್ಲಿ ಅನೇಕ ಏರುಪೇರುಗಳನ್ನು ಕಂಡಿದ್ದೇನೆ. ಇಂದಿರಾ ಗಾಂಧಿ ಅವರ ಕಾಲದಿಂದ ಹಿಡಿದು ಸೋನಿಯಾ ಗಾಂಧಿವರೆಗೆ ಪಕ್ಷವು ನನಗೆ ಅನೇಕ ಜವಾಬ್ದಾರಿಗಳನ್ನು ನೀಡಿದೆ” ಎಂದು ಕೃತಜ್ಞತೆ ಸಲ್ಲಿಸಿದರು. ರಾಜಕೀಯ ಮತ್ತು ಮಾಧ್ಯಮ ಕ್ಷೇತ್ರಗಳ ಕುರಿತು ಮಾತನಾಡಿದ ಖರ್ಗೆ, “ಪ್ರಜಾಪ್ರಭುತ್ವ ಬಲಿಷ್ಠವಾಗಿರಬೇಕಾದರೆ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ರಾಜಕೀಯ ವ್ಯವಸ್ಥೆಯಲ್ಲೂ ಮೌಲ್ಯಾಧಾರಿತ ಬದಲಾವಣೆ ಅಗತ್ಯವಿದೆ. ಕಳೆದ ಆರು ದಶಕಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಂಡಿದ್ದೇನೆ. ಇನ್ನಷ್ಟು ಸುಧಾರಣೆ ಅಗತ್ಯವಾಗಿದೆ” ಎಂದು ಹೇಳಿದರು.
ರಾಜ್ಯಸಭಾ ಚುನಾವಣೆಯಲ್ಲಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಇದು ಅಸಾಮಾನ್ಯ ಪ್ರಕರಣ. ಸುಪ್ರೀಂಕೋರ್ಟ್ ಸೂಚನೆಯಂತೆ ಹೈಕೋರ್ಟ್‌ನಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತೇವೆ. ಮಧ್ಯಪ್ರದೇಶದಲ್ಲಿ ನಡೆದಿರುವುದು ಕಾನೂನುಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ” ಎಂದು ಆರೋಪಿಸಿದರು.
ಇದೇ ವೇಳೆ, ಕೆಲ ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ಖರ್ಗೆ, ಮತ ವಿಭಜನೆ ಹಾಗೂ ಮತ ಖರೀದಿ ಆರೋಪಗಳ ಕುರಿತೂ ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















