ಸುದ್ದಿಒನ್, ಚಿತ್ರದುರ್ಗ, ಜೂ.21 : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಸಿ.ಶಿವಣ್ಣ ಫೌಂಡೇಶನ್ ಟ್ರಸ್ಟ್ ಪರಿಸರ ರಕ್ಷಣೆ ಕಾರ್ಯಕ್ಕೆ ಮುಂದಾಗಿದೆ.
ಚಂದ್ರವಳ್ಳಿಯಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 7 ಗಂಟೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಟ್ರಸ್ಟ್ ಸದಸ್ಯ, ವಕೀಲ ಬಿ.ಎಸ್.ನಾಗರಾಜ್ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿ ರಾಜಣ್ಣ, ನಗರಸಭೆ ಆಯುಕ್ತೆ ಎಂ.ರೇಣುಕಾ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಅರಣ್ಯ ಇಲಾಖೆ, ನಗರಸಭೆ, ಪತ್ರಕರ್ತರ ಸಂಘ, ವಕೀಲರ ಸಂಘದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಪರಿಸರಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಕಳೆದ ವರ್ಷ ರಣ ಬಿಸಿಲು, ಬಿಸಿ ಗಾಳಿಯು ಮರ-ಗಿಡಗಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಿದ್ದು, ಪ್ರತಿ ವ್ಯಕ್ತಿ, ಸಂಘಟನೆ-ಸಂಸ್ಥೆಗಳ ಜವಾಬ್ದಾರಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಟ್ರಸ್ಟ್ ವತಿಯಿಂದ 50 ಸಾವಿರ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರತಿ ವರ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲಾಗುತ್ತಿತ್ತು. ಈ ಬಾರಿ ಆ ಕಾರ್ಯದ ಜೊತೆಗೆ ಪರಿಸರ ಉಳಿವು, ಅಭಿವೃದ್ಧಿಗೆ ಶ್ರಮಿಸಲು ಚಿಂತಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಬಿ.ಎಸ್.ನಾಗರಾಜ್ ತಿಳಿಸಿದ್ದಾರೆ.