ಚಿತ್ರದುರ್ಗ,(ಫೆ.25) : ಚಿತ್ರದುರ್ಗ ಜಿಲ್ಲೆಯಲ್ಲಿ 5 ಲಕ್ಷ ಕುಟುಂಬಗಳಿವೆ. ಸುಮಾರು 12 ಲಕ್ಷ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಲಾಭ ಪಡೆದಿದ್ದಾರೆ. ಜಿಲ್ಲೆಯ ಪ್ರತಿಯೊಂದು ಕುಟುಂಬದಲ್ಲಿ 2 ರಿಂದ 3 ಜನರು ಸರ್ಕಾರದ ಯಾವುದಾದರು ಒಂದು ಯೋಜನೆಯ ಫಲಾನುಭವಿಗಳಾಗಿದ್ದಾರೆ.
ಮಾರ್ಚ್ 4 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು 75 ಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಜಿಲ್ಲೆಯಲ್ಲಿ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮ ಆಯೋಜನೆ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಆದೇಶದಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಫಲಾನುಭವಿಗಳ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಚಿತ್ರದುರ್ಗದಲ್ಲಿ ಜರುಗುವ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳುವುದು ವಿಶೇಷವಾಗಿದೆ.
ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ, ಸಮಾವೇಶಕ್ಕೆ ಕರೆ ತರುವ ಹೊಣೆ ಹೊರಬೇಕು. ಈ ಮೂಲಕ ಜನರಲ್ಲಿ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ವಂಚಿತರಾದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಸರ್ಕಾರ ಯೋಜನೆಗಳನ್ನ ಮುಟ್ಟಿಸುವ ಕೆಲಸ ಮಾಡಬೇಕು ಎಂದರು.
ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಬೇಕು. ಫಲಾನುಭವಿಗಳಿಗೆ ಸೂಕ್ತ ಆಸನ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಕಲ್ಪಿಸಬೇಕು. ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು.
ಈಗಾಗಲೇ ಇಲಾಖಾವಾರು ಕರೆತರುವ ಫಲಾನುಭವಿಗಳ ಸಂಖ್ಯೆಯನ್ನು ನಿಗದಿಪಡಿಸಲಾಗಿದ್ದು, ಕನಿಷ್ಟ 75 ಸಾವಿರ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು. ಈ ಎಲ್ಲ ಫಲಾನುಭವಿಗಳನ್ನು ತಪ್ಪದೆ ಸಮಾವೇಶಕ್ಕೆ ಕರೆತರುವ ಹೊಣೆ ಆಯಾ ಇಲಾಖೆ ಅಧಿಕಾರಿಗಳದಾಗಿರುತ್ತದೆ.
ಫಲಾನುಭವಿಗಳನ್ನು ಗುರುತಿಸಿ ಕರೆತರುವುದರಿಂದ ಆಯಾ ಇಲಾಖಾ ಅಧಿಕಾರಿಗಳ ಗೌರವವೂ ಹೆಚ್ಚಾಗುತ್ತದೆ. ಸಮಾವೇಶಕ್ಕೆ ಕರೆತರುವ ಫಲಾನುಭವಿಗಳ ಮೇಲ್ವಿಚಾರಣೆಗೆ ಪ್ರತಿ ತಾಲ್ಲೂಕಿಗೆ ಒಬ್ಬರು ಅಧಿಕಾರಿಗಳನ್ನು ನೇಮಿಸಲಾಗುವುದು ಎಂದರು. ಯಾವುದೇ ಅಧಿಕಾರಿಗಳು ಫಲಾನುಭವಿಗಳನ್ನು ಸಮಾವೇಶಕ್ಕೆ ಕರೆತರುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಎಚ್ಚರಿಕೆಯನ್ನೂ ಸಚಿವರು ನೀಡಿದರು.
ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್ ಸರ್ಕಾರದಿಂದ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತಿದೆ. ಇದರಲ್ಲಿ ಸರ್ಕಾರದ ಜನಪರ ಯೋಜನೆಗಳು ಹಾಗೂ ಸಾಧನೆಗಳ ಕುರಿತು ಜನರಿಗೆ ಸಾರಿ ಹೇಳಲಾಗುವುದು. ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರದ ರೈತ ವಿದ್ಯಾನಿಧಿ, ರೈತ ಶಕ್ತಿ, ರೈತರ ಮಕ್ಕಳಿಗೆ ಕೃಷಿ ವಿವಿಗಳಲ್ಲಿ ಶೇ.50 ರಷ್ಟು ಸ್ಥಾನಗಳನ್ನು ಮೀಸಲಿಡುವ ಬಗ್ಗೆ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಹೆಚ್ಚುವ ಬಗ್ಗೆ ಹೇಳಿರಲಿಲ್ಲ. ಆದರೆ ಇವುಗಳೆಲ್ಲವನ್ನು ಸರ್ಕಾರ ಜಾರಿ ಮಾಡಿದೆ ಎಂದರು.
ಗೈರಾದ ಅಧಿಕಾರಿಗಳಿಗೆ ನೋಟಿಸ್:
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಲವು ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದನ್ನು ಗಮನಿಸಿದ ಮಂತ್ರಿಗಳು ಹಾಗೂ ಶಾಸಕರು ಗೈರು ಹಾಜರಿಯನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳಿಗೆ ನೋಟಿಸ್ ನೀಡಿ, ಸಂಬಂದ ಪಟ್ಟ ಇಲಾಖೆ ಮುಖ್ಯಸ್ಥರಿಗೆ ಸೂಕ್ತ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿ.ಪಂ.ಸಿಇಓ ದಿವಾಕರ.ಎಮ್.ಎಸ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಪರುಶುರಾಮ.ಕೆ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.