ಬೆಂಗಳೂರು: ಕಳೆದ ನಾಲ್ಕೈದು ದಿನದಿಂದ ರಾಜ್ಯಾದ್ಯಂತ ಮಳೆ ಸುರಿಯುತ್ತಿದ್ದು, ಜನರು ಹೈರಾಣಾಗಿದ್ದಾರೆ. ಮಳೆ ಬರಲಿ ಬರಲಿ ಎನ್ನುತ್ತಿದ್ದವರು ಕೆಲವು ಜಿಲ್ಲೆಯಲ್ಲಿ ಮಳೆ ನಿಂತರೆ ಸಾಕಪ್ಪ ಎನ್ನುವಂತಾಗಿದೆ. ಇಂದು ಕೂಡ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯದಲ್ಲಿ ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿದೆ. ಇದರ ಪರಿಣಾಮ ಕೆಲವು ಕಡೆ ರಸ್ತೆ ಸಂಚಾರದಲ್ಲಿ ಸಮಸ್ಯೆ ಉಂಟಾಗಿದೆ. ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಬೆಳೆದ ಬೆಳೆಯೆಲ್ಲಾ ಹಾನಿಗೊಳಗಾಗುತ್ತಿದೆ.
ಇಂದು ಸಹ ಮಳೆ ಮುಂದುವರೆಯಲಿದ್ದು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಶಿವಮೊಗ್ಗ, ಹಾಸನ, ಮಂಡ್ಯ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.