ಚಿತ್ರದುರ್ಗ, (ಅಕ್ಟೋಬರ್.26) : ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಎನ್‍ಆರ್‍ಎಲ್‍ಎಂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಅಭಿಯಾನ ನಿರ್ವಹಣಾ ಘಟಕ, ಜಿಲ್ಲಾ ಪಂಚಾಯತ್ ಚಿತ್ರದುರ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಅಯೋಜಿಸಿದ್ದ ಸ್ವಸಹಾಯ ಸಂಘಗಳ ಸದಸ್ಯರು ಉತ್ಪಾದಿಸುವ ದೀಪಗಳ ಮಾರಾಟ ಮಳಿಗೆಯನ್ನು ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಉದ್ಘಾಟಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ.ಎಸ್. ಗಾಯತ್ರಿ ಮಾತನಾಡಿ, ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಂಜೀವಿನಿ ಮಾರಾಟ ಮಾಳಿಗೆ ಸದಾ ಇದ್ದೇ ಇರುತ್ತದೆ. ಇಲ್ಲಿ ಸ್ವ-ಸಹಾಯ ಸಂಘಗಳು ಮಾಡುವ ಉತ್ಪನ್ನಗಳನ್ನು ಮಾರಾಟ ಮಾಡವ ಸಲುವಾಗಿ ಅವರಿಗೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 154 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು ಇದ್ದು, ಅದರಲ್ಲಿ 7200 ಸ್ವ-ಸಹಾಯ ಸಂಘಗಳು ನೊಂದಣಿಯಾಗಿವೆ. ಆ ಸ್ವ-ಸಹಾಯ ಸಂಘಗಳಿಗೆ ನೀಡುವ ಬಂಡಾವಳ ನಿಧಿಯನ್ನು ಬಳಕೆ ಮಾಡಿಕೊಂಡು ವಿವಿಧ ಆದಾಯ ಉತ್ಪನ್ನ ಚಟುವಟಿಕೆಗಳನ್ನು ನಡೆಸುತ್ತಿವೆ ಎಂದರು.
ರಾಜ್ಯ ಅಭಿಯಾನ ಘಟಕದ ನಿದೇರ್ಶನದಂತೆ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಆನೇಕ ಸ್ವ-ಸಹಾಯ ಸಂಘಗಳು ದೀಪಗಳನ್ನು ತಯಾರು ಮಾಡುವುದರಿಂದ ಜನರಿಗೆ ತಲುಪಲಿ ಮತ್ತು ಅವರಿಗೆ ಅದಾಯ ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಈ ಒಂದು ದೀಪಗಳನ್ನು ಮಾರಾಟ ಮಾಡುವುದಕ್ಕೆ ಸ್ವ-ಸಹಾಯ ಸಂಘಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂದರು.
ವಿಶೇಷವಾಗಿ ಹಸುವಿನ ಬೆರಣಿ ಮತ್ತು ಹಕ್ಕಿ ಹಿಟ್ಟಿನಿಂದ ತಯಾರಿಸಿರುವಂತಹ ದೀಪಗಳು ಮಾರಾಟಕ್ಕೆ ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಬಂದು ಈ ದೀಪಗಳನ್ನು ಖರೀದಿಸುವ ಮೂಲಕ ಸ್ವಸಹಾಯ ಸಂಘಗಳನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಇದ್ದರು.