ಬೆಂಗಳೂರು: ಬೆಂಗಳೂರು ನಗರ ಸೇರಿ ವಿವಿಧ ಜಿಲ್ಲೆಗಳ ಉಸ್ತುವಾರಿ ಯಾರಿಗೆ ನೀಡಬೇಕೆಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ. ಆ ವಿಚಾರದಲ್ಲಿ ನಾನು ಮೂಗು ತೂರಿಸುವುದಿಲ್ಲ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿಗಳು ಉಸ್ತುವಾರಿ ಸಚಿವರ ಕುರಿತು ನಿರ್ಧರಿಸಲಿದ್ದಾರೆ ಎಂದು ವಸತಿ ಮತ್ತು ಮೂಲಸೌಲಭ್ಯ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ನಗರದ ಉಸ್ತುವಾರಿಯನ್ನು ಅಶೋಕನಿಗೆ ಕೊಡ್ತಾರಾ, ಸಿಎಂ ಇಟ್ಟುಕೊಳ್ಳುತ್ತಾರಾ ಇಲ್ಲಾ ಸೋಮಣ್ಣನಿಗೆ ಕೊಡ್ತಾರಾ, ಇಲ್ಲಾ ಎರಡು ಮಾಡ್ತಾರ, ಏನು ಮಾಡಿದ್ರೂ ನಮ್ಮ ತಕರಾರಿಲ್ಲ” ಎಂದು ತಿಳಿಸಿದರು.
ಬೆಂಗಳೂರು ನಗರಕ್ಕೆ ಯಾರನ್ನೂ ಉಸ್ತುವಾರಿ ಸಚಿವರನ್ನಾಗಿ ಮಾಡಿಲ್ಲ. ಕೋವಿಡ್ ನಿರ್ವಹಣೆ, ದಸರಾ ಮತ್ತು ಸ್ವಾತಂತ್ರ್ಯೋತ್ಸವ ಸಂಬಂಧ ತಾತ್ಕಾಲಿಕ ನೇಮಕಾತಿ ನಡೆದಿದೆ ಎಂದು ಸೋಮಣ್ಣ ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ನಾನು ಜೆ.ಎಚ್.ಪಟೇಲ್ ಅವರ ಸಚಿವ ಸಂಪುಟದಲ್ಲಿ ಬೆಂಗಳೂರು ನಗರದ ಸಚಿವನಾಗಿದ್ದವನು. ನನಗೆ ಎಲ್ಲರಿಗಿಂತ ಹೆಚ್ಚು ಅನುಭವ ಮತ್ತು ಅರ್ಹತೆ ಇದೆ. ಆದ್ದರಿಂದ ನನ್ನ ಹೆಸರನ್ನೂ ಪರಿಗಣಿಸಿ ಎಂದು ಮುಖ್ಯಮಂತ್ರಿಗಳನ್ನು ಕೇಳಿರುವುದು ನಿಜ. ಬುದ್ಧಿವಂತರಿದ್ದರೆ ಚರ್ಚೆ ನಡೆಯುತ್ತದೆ. ಬೆಂಗಳೂರು ನಗರದ ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದೇವೆ ಎಂದರು.