ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ : ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದ ಗೋವಿಂದ ಕಾರಜೋಳ ಮನವಿ

2 Min Read

 

ಸುದ್ದಿಒನ್, ಚಿತ್ರದುರ್ಗ, ಜುಲೈ.26 : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವುದರ ಜೊತೆಗೆ ಕಳೆದ ಬಜೆಟ್‌ನಲ್ಲಿ ಘೋಷಿಸಿರುವ 5300 ಕೋಟಿ ರೂ.ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೋರಿ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ರವರನ್ನು ಗುರುವಾರ ನವದೆಹಲಿಯಲ್ಲಿ ಸಂಸದ ಗೋವಿಂದ ಕಾರಜೋಳರವರು ಭೇಟಿ ಮಾಡಿ ಮನವಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯು ಮಧ್ಯ ಕರ್ನಾಟಕದ ಬರಪೀಡಿತ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರುಣಿಸುವ ಮಹತ್ವದ ನೀರಾವರಿ ಯೋಜನೆಯಾಗಿದ್ದು, ಮೊದಲ ಹಂತದಲ್ಲಿ ತುಂಗಾ ನದಿಯಿಂದ 17.40 ಟಿ.ಎಂ.ಸಿ. ನೀರನ್ನು ಭದ್ರಾ ಜಲಾಶಯಕ್ಕೆ ಲಿಫ್ಟ್ ಮಾಡಿ, ಎರಡನೇ ಹಂತದಲ್ಲಿ ಭದ್ರಾ ಜಲಾಶಯದಿಂದ 29.90 ಟಿ.ಎಂ.ಸಿ. ನೀರನ್ನು ನಾಲ್ಕು ಬರಪೀಡಿತ ಜಿಲ್ಲೆಗಳ 2,55,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರಾವರಿ ಕಲ್ಪಿಸುವುದು ಹಾಗೂ ಸುಮಾರು 367 ಕೆರೆಗಳ ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದಾಗಿದೆ. ಈ ಯೋಜನೆಗೆ 2020 ರ ಡಿಸೆಂಬರ್ 16 ರಂದು 21, 473 ಕೋಟಿ ರೂ. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ್ದು, ಜಲ ಸಂಪನ್ಮೂಲ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ 2020 ರ ಡಿಸೆಂಬರ್ 24 ರಂದು 16,125 ಕೋಟಿ ರೂಗಳಿಗೆ ಒಪ್ಪಿಗೆ ನೀಡಿದೆ. ಬಂಡವಾಳ ಒಪ್ಪಿಗೆ ಸಮಿತಿ 2021 ರ ಮಾರ್ಚ್ 25 ರಂದು ಒಪ್ಪಿಗೆ ನೀಡಿದೆಯಲ್ಲದೇ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಶಿಫಾರಸ್ಸು ಮಾಡಿದೆ.

2022 ರ ಅಕ್ಟೋಬರ್ 12 ರಂದು ನಡೆದ ಸಾರ್ವಜನಿಕ ಹೂಡಿಕೆ ಮಂಡಳಿ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡಲು ಒಪ್ಪಿಗೆ ಸೂಚಿಸಿದೆ. ಅದನ್ನು ಕಳೆದ ವರ್ಷದ ಕೇಂದ್ರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ನೆರವಾಗಿ ಘೋಷಣೆ ಮಾಡಲಾಗಿದೆ.

ಬರಪೀಡಿತ ಜಿಲ್ಲೆಗಳ ರೈತರು ಮಳೆಯ ಕೊರತೆಯಿಂದ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗೊತಗೊಳಿಸುವ ಅಗತ್ಯವಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯ ಅಡಿಯಲ್ಲಿ ಘೋಷಣೆ ಮಾಡುವ ಕೆಲಸ ನಿಧಾನವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕೇಂದ್ರದ ಅನುದಾನ ಬಿಡುಗಡೆಯಾಗದಿರುವುದರಿಂದ ಯೋಜನೆ ಅನುಷ್ಟಾನ ವಿಳಂಬವಾಗುತ್ತಿದೆ.

ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆಯ ವೇಗವರ್ಧಿತ ನೀರಾವರಿ ಪ್ರಯೋಜನಾ ಯೋಜನೆಯಡಿ 5300 ಕೋಟಿ ಅನುದಾನ ಬಿಡಗಡೆ ಮಾಡಬೇಕು ಹಾಗೂ ರಾಷ್ಟೀಯ ಯೋಜನೆ ಎಂದು ಘೋಷಿಸುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *