ಭಾಲ್ಕಿ : ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕುರಿತು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಟೀಕಾತ್ಮಕವಾಗಿ ಮಾತನಾಡಿದ್ದಾರೆ. “ಖರ್ಗೆ ಅವರು ಕೆಲವೊಮ್ಮೆ ಭಯೋತ್ಪಾದಕರು ಮತ್ತು ಅವರಿಗೆ ವಿರುದ್ಧವಾಗಿ ಹೋರಾಡುವವರ ನಡುವಿನ ವ್ಯತ್ಯಾಸವನ್ನೂ ಗಮನಿಸುವುದಿಲ್ಲವೆಂದು ಅನಿಸುತ್ತದೆ” ಎಂದು ಹೇಳಿದರು.
ಜಿಲ್ಲೆಯ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ನಡೆದ ಭಾಲ್ಕಿ ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಖರ್ಗೆ ಮತ್ತು ತಮ್ಮ ನಡುವೆ ವಿಚಾರಧಾರೆಯಲ್ಲಿ ವ್ಯತ್ಯಾಸವಿದ್ದರೂ, ವೈಯಕ್ತಿಕವಾಗಿ ಸ್ನೇಹಭಾವವಿದೆ ಎಂದು ತಿಳಿಸಿದರು. ಇತ್ತೀಚಿನ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಖರ್ಗೆ ಭಯೋತ್ಪಾದಕ ಎಂದು ಟೀಕಿಸಿದ್ದನ್ನು ಅವರು ಪರೋಕ್ಷವಾಗಿ ಉಲ್ಲೇಖಿಸಿದರು.
ಇದು ಬಸವಣ್ಣನವರ ಪವಿತ್ರ ನೆಲವಾಗಿದ್ದು, ಅವರ ತತ್ವಗಳನ್ನು ಅನುಸರಿಸಿ ಮಠ ಕಾರ್ಯನಿರ್ವಹಿಸುತ್ತಿದೆ ಎಂದು ಉಪರಾಷ್ಟ್ರಪತಿ ಹೇಳಿದರು. ಬಸವಲಿಂಗ ಪಟ್ಟದ್ದೇವರು ಸತ್ಯ, ಸೇವೆ ಮತ್ತು ಮಾನವೀಯ ಮೌಲ್ಯಗಳ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.ಇದೇ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಸವಣ್ಣನವರು ಮನುವಾದ ಮತ್ತು ಚಾತುರ್ವರ್ಣ ವ್ಯವಸ್ಥೆಯನ್ನು ತಿರಸ್ಕರಿಸಿ ಸಮಾನತೆಯ ಸಂದೇಶ ಸಾರಿದರು ಎಂದರು. ಎಲ್ಲಾ ಜಾತಿಗಳ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಬಸವಣ್ಣನವರ ಆದರ್ಶಗಳನ್ನು ಇಂದಿನ ಸಮಾಜದಲ್ಲಿ ಪ್ರಸಾರ ಮಾಡುವ ಅಗತ್ಯವಿದೆ ಎಂದು ಹೇಳಿದರು. ಬಸವಲಿಂಗ ಪಟ್ಟದ್ದೇವರು ಪ್ರಗತಿಪರ ಚಿಂತನೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವುದನ್ನು ಅವರು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







