ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಏ.28) : ಮೊಳಕಾಲ್ಮೂರು ಕ್ಷೇತ್ರ 10 ವರ್ಷಗಳಿಂದ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ತಿಳಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಮೊಳಕಾಲ್ಮೂರು ಅತ್ಯಂತ ಹಿಂದುಳಿದ ಕ್ಷೇತ್ರವಾಗಿದ್ದು ಅಭಿವೃದ್ಧಿಯಲ್ಲಿ ತುಂಬಾ ಹಿನ್ನಡೆಯಾಗಿದೆ, ಹಾಗಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ನಾಡಿಮಿಡಿತ ಅರಿತಿರುವ ಅತ್ಯಂತ ಅನುಭವಿ ಹಾಗೂ ಹಿರಿಯರಾದ ಎನ್.ವೈ.ಗೋಪಾಲಕೃಷ್ಣ ಅವರಿಗೆ ಮತ ನೀಡುವ ಮೂಲಕ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಪಣ ತೊಡಬೇಕು ಎಂದು ಮತದಾರರಿಗೆ ಕರೆ ನೀಡಿದರು.
ಗೃಹಲಕ್ಷ್ಮಿ, ಗೃಹಜ್ಯೋತಿ, ಬಡಕುಟುಂಬಕ್ಕೆ 10 ಕೆ.ಜಿ ಉಚಿತ ಅಕ್ಕಿ, ನಿರುದ್ಯೋಗಿ ಪದವೀಧರ ಯುವಕರಿಗೆ ರೂ.3000/-, ಡಿಪ್ಲೋಮಾ ಪದವೀಧರರಿಗೆ ರೂ.1500/- ಗ್ಯಾರಂಟಿ ಮಾತ್ರವಲ್ಲದೇ 5ನೇ ಗ್ಯಾರಂಟಿಯಾಗಿ ಮಹಿಳೆಯರಿಗೆ ಸರ್ಕಾರಿ ಬಸ್ ಪ್ರಯಾಣ ಉಚಿತವಾಗಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ ಈ ಎಲ್ಲಾ ಗ್ಯಾರಂಟಿಗಳನ್ನ ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಸಿದ್ಧರಾಮಯ್ಯನವರು ನೀಡಿದ ಪ್ರತಿಯೊಂದು ಯೋಜನೆಯ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು. ಸಿದ್ಧರಾಮಯ್ಯ ಅವರು ಭ್ರಷ್ಟಚಾರ ರಹಿತವಾಗಿ ಐದು ವರ್ಷಗಳ ಕಾಲ ಸರ್ಕಾರ ನಡೆಸಿ ಅನೇಕ ಜನಪರ ಯೋಜನೆಗಳೆ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆಯಾಗಿವೆ ಎಂದು ಹೇಳಿದರು.
ಮೂರು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತಾಕಲು ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಅಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಶ್ರಮ ಸಂಘಟನೆಗೆ ಬಲಬಂತಾಗಿದೆ ಎಂದು ತಿಳಿಸಿದರು.
ಎನ್.ವೈ.ಗೋಪಾಲಕೃಷ್ಣ ಹಾಗೂ ಯೋಗೇಶ್‌ಬಾಬು ಇಬ್ಬರೂ ಜೋಡೆತ್ತುಗಳಿದ್ದಂತೆ, ಯೋಗೇಶ್‌ಬಾಬು ಅವರು ಅತ್ಯಂತ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರು. ಎನ್.ವೈ.ಗೋಪಾಲಕೃಷ್ಣ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಎಐಸಿಸಿ ವೀಕ್ಷಕರಾದ ಸಂಜಯ್‌ದತ್ ರವರು ಮಾತನಾಡಿ, ದೇಶದ ಸುರಕ್ಷತೆ ಸರ್ವಾಂಗಿಣ ಅಭಿವೃದ್ಧಿಗೆ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಬೇಕು. ದೇಶವನ್ನು ಪ್ರಗತಿ ದಿಕ್ಕಿನಲ್ಲಿ ಕೊಂಡೊಯ್ಯಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಹಾಗಾಗಿ ಕಾಂಗ್ರೆಸ್‌ಗೆ ಮತ ನೀಡಿ ಶೇ.40% ಭ್ರಷ್ಟಚಾರದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತು ಹೊಗೆಯಿರಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ, ಯೋಗೇಶ್‌ಬಾಬು,ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್‌ರೆಡ್ಡಿ, ಮಾಜಿ ಜಿ.ಪಂ. ಅಧ್ಯಕ್ಷ ಬಾಲರಾಜ್, ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಜಯಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.