ಚಿತ್ರದುರ್ಗ, (ಅಕ್ಟೋಬರ್.11) :ಹೊಸದುರ್ಗ ತಾಲ್ಲೂಕಿನ ಪಟ್ಟಣ ಮತ್ತು 346 ಗ್ರಾಮಗಳಿಗೆ ನೀರು ಪೂರೈಸುವ ಉದ್ದೇಶದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಮನೆ ಮನೆಗೆ ಗಂಗೆಯನ್ನು ತರುವಂತಹ ಕಾರ್ಯ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಹೇಳಿದರು.
ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದ ಸಮೀಪ ಸೋಮವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹೊಸದುರ್ಗ ಪಟ್ಟಣ ಸೇರಿದಂತೆ ತಾಲ್ಲೂಕಿನ 346 ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಮೊದಲ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಯೋಜನೆಯಡಿ ಹೊಸದುರ್ಗ ಪಟ್ಟಣ ಹಾಗೂ ತಾಲ್ಲೂಕಿನಲ್ಲಿ ಬರುವ ಎಲ್ಲಾ 346 ಗ್ರಾಮಗಳಿಗೆ ರೂ.480 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಪೂರೈಕೆಗೆ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಎರಡು ಹಂತದಲ್ಲಿ ಅನುಷ್ಠಾನ ಮಾಡುವ ಮೂಲಕ ತಾಲ್ಲೂಕಿನ ಪ್ರತಿ ಹಳ್ಳಿಗೂ ಹಾಗೂ ಪಟ್ಟಣಕ್ಕೂ ನೀರು ಒದಗಿಸಲಾಗುವುದು ಎಂದರು.
ಈ ಯೋಜನೆಗೆ ಸಂಬಂಧಿಸಿದಂತೆ ಹಣವನ್ನು ಸಹ ಬಿಡುಗಡೆಯನ್ನು ಮಾಡಿ ಇದರ ಕಾಮಗಾರಿಯನ್ನು ಹೈದಾರಬಾದ್‍ನ ಮೆ.ಕೆ. ಭೂಪಲ್ ಇಂಜಿನಿಯರ್ಸ್ ಅಂಡ್ ಕಂಟ್ರಾಕ್ಟರ್ಸ್ ಪ್ರವೈಟ್ ಲಿಮಿಟೆಡ್ ಅವರನ್ನು ನೇಮಿಸಲಾಗಿದೆ ಎಂದರು.
ಶಾಸಕ ಗೂಳಿಹಟ್ಟಿ ಡಿ. ಶೇಖರ್ ಮಾತನಾಡಿ, ತಾಲ್ಲೂಕಿನ 346 ಹಳ್ಳಿಗಳ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರು ಸರಬರಾಜು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಭದ್ರ ಜಲಾಶಯದಿಂದ ಸುಮಾರು 1 ಟಿ.ಎಂ.ಸಿ ನೀರನ್ನು ಪಡೆದುಕೊಂಡು ತಾಲ್ಲೂಕಿನ 346 ಹಳ್ಳಿಗಳು ಕೂಡ ನಲ್ಲಿಯ ಮೂಲಕ ನೀರು ಸರಬರಾಜು ಆಗಬೇಕು ಈ ಕಾರಣದಿಂದ ಈ ಯೋಜನೆಗೆ ಶಂಕುಸ್ಥಾಪನೆಯನ್ನು ನೆರವೇರಿಸಿ ಈ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದೆ ಎಂದು ಹೇಳಿದರು.
ಈ ಯೋಜನೆಗೆ 2 ಹಂತಗಳಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸುವ ಸಲುವಾಗಿ ರೂ.335 ಕೋಟಿ ವೆಚ್ಚದಲ್ಲಿ ಹಾಗೂ ಎರಡನೇ ಹಂತದಲ್ಲಿ ರೂ.145 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲಾಗುವುದು ಎಂದ ಅವರು ತಾಲ್ಲೂಕಿನ ಕಟ್ಟ ಕಡೆಯ ಹಳ್ಳಿ ಹಳ್ಳಿಗೂ ಕಲ್ಪಿಸುವುದು ಈ ಯೋಜನೆಯ ಬಹು ದೊಡ್ಡ ಆಶಯವಾಗಿದೆ ಎಂದರು.
ರಾಜ್ಯ ಖನಿಜ ನಿಗಮದ ಅಧ್ಯಕ್ಷರಾದ ಎಸ್.ಲಿಂಗಮೂರ್ತಿ, ಪುರಸಭೆ ಅಧ್ಯಕ್ಷರಾದ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ; ಕೆ.ನಂದಿನಿದೇವಿ, ತಹಶೀಲ್ದಾರ್ ತಿಪ್ಪೇಸ್ವಾಮಿ, ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಗ್ರಾಮೀಣ ನೀರು ಸರಬರಾಜು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜ್ಞಾನೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.