Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ: ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಲು ಸೂಚನೆ

---Advertisement---

ಶಿವಮೊಗ್ಗ: ಪ್ರಸ್ತುತ ಸಾಲಿನಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ, ಭದ್ರಾ ಅಚ್ಚುಕಟ್ಟು ಪ್ರದೇಶದ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆಗಾಗಿ ಜಲಾಶಯದ ವಿತರಣಾ ನಾಲೆಗಳಿಗೆ ದಿನಾಂಕ 17.09.2026ರ ಮಧ್ಯರಾತ್ರಿ 12.00 ಗಂಟೆಯಿಂದ ದಿನಾಂಕ 02.10.2026 ರವರೆಗೆ ಒಟ್ಟು 15 ದಿನಗಳ ಕಾಲ ನೀರನ್ನು ಹರಿಸಲು ನಿರ್ಧರಿಸಲಾಗಿದೆ. ಅಚ್ಚುಕಟ್ಟು ಭಾಗದಲ್ಲಿ ಎದುರಾಗಿರುವ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ಹಾಗೂ ಕೆರೆ-ಹಳ್ಳಗಳನ್ನು ತುಂಬಿಸಲು ನೀರು ಹರಿಸುವಂತೆ ರೈತರು, ಶಾಸಕರು ಹಾಗೂ ರೈತ ಮುಖಂಡರು ಒತ್ತಾಯಿಸಿದ್ದರು. ಅಲ್ಲದೆ ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಶಾಂತಿಸಾಗರ ಮತ್ತು ಮಲೆಬೆನ್ನೂರು ಭಾಗಗಳಲ್ಲಿ ಪ್ರತಿಭಟನೆಗಳು ಸಹ ನಡೆದಿದ್ದವು.

ಈ ಕುರಿತು ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಅನ್ವಯ, ಜಲಸಂಪನ್ಮೂಲ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಮಧು ಬಂಗಾರಪ್ಪ ಮತ್ತು ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ನೀರನ್ನು ಕೇವಲ ಕುಡಿಯುವ ನೀರು, ಅಂತರ್ಜಲ ವೃದ್ಧಿ ಹಾಗೂ ಕೆರೆಗಳನ್ನು ತುಂಬಿಸಲು ಮಾತ್ರ ಬಳಸಬೇಕಾಗಿದ್ದು, ಡಿಸೆಂಬರ್ 2026 ರವರೆಗೆ ಅಭಾವ ಎದುರಾಗದಂತೆ ಸದ್ಬಳಕೆ ಮಾಡಿಕೊಳ್ಳಬೇಕು.

ಯಾವುದೇ ಕಾರಣಕ್ಕೂ ಈ ನೀರನ್ನು ಬೆಳೆಗಳಿಗೆ ಬಳಸುವಂತಿಲ್ಲ ಹಾಗೂ ಅನಧಿಕೃತವಾಗಿ ನೀರೆತ್ತುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದ್ದು, ಅಚ್ಚುಕಟ್ಟು ಭಾಗದ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Join WhatsApp

Join Now

Join Telegram

Join Now