ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡದಿರಲು ಕಾರಣಗಳೇನು ? ಹೈಕಮಾಂಡ್ ನಿಲುವೇನು ?

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಉತ್ಸಾಹದಲ್ಲಿದೆ. ಇದಕ್ಕೆ ಪ್ರಮುಖ ಕಾರಣ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂದು ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.ಅವರ ಕಾರ್ಯವೈಖರಿಯ ಬಗ್ಗೆ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಬೇರೆಬೇರೆ ರಾಜ್ಯಗಳಲ್ಲೂ  ಅವರ ಪಕ್ಷ ಸಂಘಟನೆಯ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.

ಅವರಿಗೆ ಮುಖ್ಯಮಂತ್ರಿ ಸ್ಥಾನ  ನೀಡಲಾಗುವುದು ಎಂಬ ಮಾತುಗಳು ಕೇಳಿ ಬಂದಿತ್ತು.ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗುತ್ತಿದ್ದಾರೆ. ಅವರು ಶನಿವಾರ (ಮೇ 20) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದೇನೇ ಇರಲಿ.. ಅದೇ ಸಮಯದಲ್ಲಿ ಕುತೂಹಲಕರ ಅಂಶಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡದಿರಲು ಮತ್ತೊಂದು ಕಾರಣವಿದೆ ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಿದೆ. ಹಿರಿಯ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರ ಹೇಳಿಕೆ ಈ ಚರ್ಚೆಗೆ ಕಾರಣವಾಯಿತು.

ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2024ರ ಲೋಕಸಭೆ ಚುನಾವಣೆ ಮುಗಿಯುವವರೆಗೂ ಮುಂದುವರಿಯಲಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಡಿ.ಕೆ.ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದೇ ನಿರ್ಧಾರವನ್ನು ಎಐಸಿಸಿ ತೆಗೆದುಕೊಂಡಿದೆ ಎಂದು ಕೆ.ಸಿ.ವೇಣುಗೋಪಾಲ್ ವಿವರಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಡಿಕೆ ಶಿವಕುಮಾರ್ ಅಪಾರವಾಗಿ ಶ್ರಮಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಈಗ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಆಡಳಿತದ ಕಡೆ ಗಮನ ಹರಿಸುತ್ತಾರೆ.
ಇದರಿಂದಾಗಿ 2024 ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿಯುವ ಅವರಂತಹ ನಾಯಕ ಸಿಗುವುದು ಕಷ್ಟ ಎಂಬ ಅಭಿಪ್ರಾಯ ಕಾಂಗ್ರೆಸ್ ಪಕ್ಷದಲ್ಲಿ ಬಲವಾಗಿ ವ್ಯಕ್ತವಾಗಿದೆ. ಹಾಗಾಗಿಯೇ 2024ರ ಲೋಕಸಭೆ ಚುನಾವಣೆವರೆಗೂ ಡಿಕೆಶಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಲು ಹೈಕಮಾಂಡ್ ನಿರ್ಧರಿಸಿರುವಂತಿದೆ.

2024 ರ ಲೋಕಸಭೆ ಚುನಾವಣೆಗೆ ಮಾತ್ರವಲ್ಲದೆ ಬೇರೆ ರಾಜ್ಯಗಳಲ್ಲೂ ಡಿ.ಕೆ.ಶಿವಕುಮಾರ್ ಅವರ ಸೇವೆಯನ್ನು ಬಳಸಿಕೊಳ್ಳಲು ರಾಹುಲ್ ಗಾಂಧಿ ನಿರ್ಧರಿಸಿರುವಂತಿದೆ. ಅದರಲ್ಲೂ ಮುಂದಿನ ವರ್ಷ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಿಕೆಶಿ ಅವರ ಕಾರ್ಯತಂತ್ರಗಳನ್ನು ಬಳಸಿಕೊಳ್ಳಲು ಚಿಂತನೆ ನಡೆದಿದೆ.

ಡಿಕೆ ಶಿವಕುಮಾರ್ ತೆಲಂಗಾಣದ ಕೆಲವು ಭಾಗಗಳಲ್ಲಿ ಕೆಲಸ ಮಾಡಿದರೆ ಪಕ್ಷಕ್ಕೆ ಲಾಭವಾಗಲಿದೆ ಎಂದು ತೆಲಂಗಾಣದ ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರು ಖರ್ಗೆ ಅವರ ಬಳಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಹಾಗಾಗಿಯೇ ಎರಡನೇ ಅವಧಿಯಲ್ಲಿ ಅವರಿಗೆ ಕರ್ನಾಟಕದ ಸಿಎಂ ಜವಾಬ್ದಾರಿ ನೀಡಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!