ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಜೈಲಿನಲ್ಲಿ ನಿಷೇಧಿತ ವಸ್ತುಗಳ ಬಳಕೆಗೆ ಸಂಬಂಧಿಸಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮೀಸಲಾದ ಕೊಠಡಿಯಲ್ಲಿ ಮೊಬೈಲ್, ಚಾರ್ಜರ್ ಹಾಗೂ ಪೆನ್ಡ್ರೈವ್ ಸೇರಿದಂತೆ ಕೆಲವು ವಸ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಲು ತಾವೇ ಸೂಚನೆ ನೀಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮತಿ ಪಡೆದು ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ತಾವು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದ ವೇಳೆ ಕೆಲವು ಲೋಪದೋಷಗಳು ಗಮನಕ್ಕೆ ಬಂದಿದ್ದವು. ಈ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಬಳಿಕ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿತ್ತು. ನಂತರ ಸಿಎಂ ಅನುಮತಿ ಪಡೆದು ಸುಮಾರು 100 ಸಿಸಿಬಿ ಅಧಿಕಾರಿಗಳನ್ನು ಒಳಗೊಂಡ ತಂಡದಿಂದ ದಾಳಿ ನಡೆಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಜೈಲಿನಲ್ಲಿ ಇರಬಾರದ ಕೆಲವು ವಸ್ತುಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೈಲಿನ ಅಕ್ರಮ ಚಟುವಟಿಕೆಗಳಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಜೈಲಿನಲ್ಲಿನ ಲೋಪದೋಷಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಕ್ರಮ ಆರಂಭಿಸಲಾಗಿದೆ. ಅಕ್ರಮ ಚಟುವಟಿಕೆಗಳಿಗೆ ಸಹಕಾರ ನೀಡಿದ ಅಧಿಕಾರಿಗಳನ್ನು ಅಮಾನತು ಮಾಡಲು ಸೂಚನೆ ನೀಡಿರುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.“ವಿಡಿಯೋ, ಆಡಿಯೋ ಏನಿದೆ ಎಂಬುದರ ಆಧಾರದ ಮೇಲೆ ಅಲ್ಲ; ಜವಾಬ್ದಾರಿಯುತ ಅಧಿಕಾರಿಗಳಿಂದ ಬಂದ ಮಾಹಿತಿ ಹಾಗೂ ನನ್ನ ಗಮನಕ್ಕೆ ಬಂದ ವಿಚಾರಗಳ ಆಧಾರದ ಮೇಲೆ ದಾಳಿ ನಡೆಸಲಾಗಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿಗೆ ಮಾತ್ರ ಕಾರ್ಯಾಚರಣೆ ಸೀಮಿತವಾಗುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ರಾಜ್ಯದ ಇತರೆ ಜೈಲುಗಳ ಮೇಲೂ ಅನಿರೀಕ್ಷಿತ ದಾಳಿ ನಡೆಸಲಾಗುವುದು. ಕಲಬುರಗಿ, ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಜೈಲಿನಲ್ಲಿ ಅಕ್ರಮ ಚಟುವಟಿಕೆ ಕಂಡುಬಂದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಜೈಲು ಇಲಾಖೆಯಲ್ಲಿರುವ ಕೆಲ ಅಧಿಕಾರಿಗಳು ಹಳೆಯ ಚಾಳಿಯನ್ನು ಮುಂದುವರಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಅಧಿಕಾರಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲೂ ಇಂತಹ ದಾಳಿಗಳು ನಿರಂತರವಾಗಿ ನಡೆಯಲಿವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.









