ಬೆಂಗಳೂರು: ಮೂಡಾ ಹಗರಣ ವಿರೋಧಿಸಿ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದೆ. ಈ ವೇಳೆ ಪಾದಯಾತ್ರೆಯಲ್ಲಿ ನೂರಾರು ಜನ ಸೇರಬಹುದು. ಹೀಗಾಗಿ ಕಾಂಗ್ರೆಸ್ ಟಕ್ಕರ್ ಕೊಡಲು ಬೇರೆಯದ್ದೇ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ನಿಂದ ಕಾರ್ಯಕ್ರಮ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಇಂದಿನಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಲದಲ್ಲಿ ಆಗಿರುವ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆದ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಇಂದಿನಿಂದ ಬಿಡದಿಯಲ್ಲಿ ಸಭೆ ನಡೆಸಲಾಗುತ್ತದೆ. ಬಿಜೆಪಿ ಅವಧಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ.
ಬಿಜೆಪಿ ನಾಯಕರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೋ ಅಲ್ಲೆಲ್ಲಾ ಒಂದು ದಿನ ಮುಂಚಿತವಾಗಿ ಈ ಕಾರ್ಯಕ್ರಮ ಮಾಡುತ್ತೇವೆ. ಬಿಜೆಪಿ ನಾಯಕರು ನಮ್ಮ ಪ್ರಶ್ನೆಗಳಿಗೆಲ್ಲ ಉತ್ತರ ನೀಡಬೇಕು. ಬಿಜೆಪಿ ನಾಯಕರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವ ರೀತಿ ಪ್ರಯತ್ನ ಮಾಡುತ್ತಿದ್ದಾರೆಂದು ಜನರಿಗೆ ತಿಳಿಸುತ್ತೇವೆ.
ಸಚಿವರು ಪ್ರತಿನಿತ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶಾಸಕರು ಹಾಗೂ ಕಾರ್ಯಕರ್ತರು ಕೂಡ ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ಜೆಡಿಎಸ್ ನಾಯಕರು ಈ ವಿಚಾರದಲ್ಲಿ ಅತಂತ್ರರಾಗಿದ್ದರು. ಜೆಡಿಎಸ್ ನವರು ಈ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದಿದ್ದರು. ಬಿಜೆಪಿಯವರು ಪಾದಯಾತ್ರೆಯ ವಿಚಾರದಲ್ಲಿ ಗೊಂದಲದಲ್ಲಿದ್ದರು ಎಂದಿದ್ದಾರೆ.