ಸರ್ಕಾರಿ ನೌಕರರು ವೇತನ ಪರಿಷ್ಕರಣೆಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ನೇತೃತ್ವದ ನಿಯೋಗ ಭೇಟಿ ಮಾಡಿದೆ. ಈ ವೇಳೆ ಹಲವು ಬೇಡಿಕೆಗಳನ್ನು ಇಟ್ಟಿದೆ. ಸಿಎಂ ಸಿದ್ದರಾಮಯ್ಯ ಅವರು ಭರವಸೆಯನ್ನು ನೀಡಿದ್ದಾರೆ.
ಏಳನೆ ವೇತನ ಆಯೋಗ ರಚನೆಯಾಗಿ 12 ತಿಂಗಳು ಕಳೆದಿದೆ. ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನವೇ ವೇತನ ಪರಿಷ್ಕರಣೆ ಮಾಡಬೇಕು. ಹೊಸ ಪಿಂಚಣಿ ಯೋಜನೆ ಅಡಿಯಲ್ಲಿ ಬರುವ ನೌಕರರನ್ನು ಹಳೆ ಪಿಂಚಣಿಗೆ ಸೇರಿಸಲಾಗಿದೆ. ಅದೇ ರೀತಿ ಎಲ್ಲಾ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಸೇರಿಸಬೇಕು. ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬ ಸದಸ್ಯರಿಗೆ ನೀಡಲಾಗುವ ನಗದು ರಹಿತ ಚಿಕಿತ್ಸೆಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಜಾರಿಗೆ ಮನವಿ ಮಾಡಲಾಗಿದೆ.
ಈ ವೇಳೆ ಸಿದ್ದರಾಮಯ್ಯ ಭರವಸೆ ನೀಡಿದ್ದು, ಏಳನೇ ವೇತನ ಆಯೋಗದ ಅಂತಿಮ ವರದಿ ಬಂದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡುವ ಕುರಿತು ನಿರ್ಧರಿಸಲಾಗುವುದು ಎಂದಿರುವ ಸಿಎಂ ಸಿದ್ದರಾಮಯ್ಯ ಅವರು, ಸಂಘದ ಸದಸ್ಯರ ಜೊತೆಗೆ ಚರ್ಚೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ. ಈ ಏಳನೇ ವೇತನ ಆಯೋಗ ಆದಷ್ಟು ಬೇಗ ಚಾಲ್ತಿಗೆ ಬರಲಿ ಎಂದೇ ಸರ್ಕಾರಿ ನೌಕರರು ಕಾಯುತ್ತಿದ್ದಾರೆ.