ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾದ ವರದಿಯಾಗಿದೆ. ಕರ್ನಾಟಕ ರಾಜ್ಯ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಪ್ರಕಟಿಸಿದ ಮಾಹಿತಿಯಂತೆ, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ದಾಖಲಾಗಿದ್ದರೂ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಾಯ್ಕಿಣಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 135 ಮಿ.ಮೀ ಮಳೆಯಾಗಿದೆ. ಬೀದರ್ ಜಿಲ್ಲೆಯ ಕಮಲಾಪುರ ತಾಲೂಕಿನ ಬೋಂತಿಯಲ್ಲಿ 111 ಮಿ.ಮೀ ಮಳೆ ಸುರಿದಿದೆ. ಉಡುಪಿ ಜಿಲ್ಲೆಯ ಬೈಂದೂರು 73 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು 61.5 ಮಿ.ಮೀ ಮಳೆಯೊಂದಿಗೆ ಮುಂದಿನ ಸ್ಥಾನದಲ್ಲಿವೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸೀಬಿ ಅಗ್ರಹಾರದಲ್ಲಿ 56 ಮಿ.ಮೀ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಂಗನಹಳ್ಳಿಯಲ್ಲಿ 54.5 ಮಿ.ಮೀ, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಿಂದಘಟ್ಟ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೆಳಗೂರಿನಲ್ಲಿ ತಲಾ 53.5 ಮಿ.ಮೀ ಮಳೆಯಾಗಿದೆ. ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಬಿರುನಾಣಿಯಲ್ಲಿ 52 ಮಿ.ಮೀ ಮಳೆ ದಾಖಲಾಗಿದೆ.ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರವಾಡದಲ್ಲಿ 49 ಮಿ.ಮೀ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊರ್ಲಪರ್ತಿಯಲ್ಲಿ 47 ಮಿ.ಮೀ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆಲಂಗೂರಿನಲ್ಲಿ 44.5 ಮಿ.ಮೀ ಹಾಗೂ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ತೆಂಗಲಿಯಲ್ಲಿ 38.5 ಮಿ.ಮೀ ಮಳೆಯಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 32 ಮಿ.ಮೀ, ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ 30 ಮಿ.ಮೀ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿಯಲ್ಲಿ 29 ಮಿ.ಮೀ ಮಳೆ ದಾಖಲಾಗಿದೆ.
ಇನ್ನು ಬಳ್ಳಾರಿ, ಧಾರವಾಡ, ಮೈಸೂರು, ಹಾಸನ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಹಾವೇರಿ, ಚಾಮರಾಜನಗರ, ದಾವಣಗೆರೆ, ವಿಜಯನಗರ, ಯಾದಗಿರಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿ ತಿಳಿಸಿದೆ.








