ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,( ಜನವರಿ13) : ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ ಜನವರಿ 15ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ಗಿನ್ನಿಸ್ ದಾಖಲೆಯ ಯೋಗಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸುಮಾರು 8 ಸಾವಿರ ಜನರು ಯೋಗಾಭ್ಯಾಸದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಉತ್ತಮ ರೀತಿಯಲ್ಲಿ ಆಯೋಜಿಸಲು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಆಚರಿಸುವ ಅಂಗವಾಗಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜ.15ರಂದು ಬೆಳಿಗ್ಗೆ 8 ಗಂಟೆಗೆ ಯೋಗಾಥಾನ್ ಕಾರ್ಯಕ್ರಮ ಪ್ರಾರಂಭವಾಗಲಿದ್ದು, 45 ನಿಮಿಷಗಳ ಕಾಲ ಯೋಗಾಭ್ಯಾಸ ನಡೆಯಲಿದೆ. ಹಾಗಾಗಿ ಬೆಳಿಗ್ಗೆ 7.30 ರೊಳಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಸಂಬಂಧಪಟ್ಟ ಶಿಕ್ಷಕರು, ದೈಹಿಕ ಶಿಕ್ಷಕರು ಮುಂಚಿತವಾಗಿ ಕರೆದುಕೊಂಡು ಬಂದು ನಿಗಧಿತ ಸ್ಥಳದಲ್ಲಿ ಹಾಜರಿರಬೇಕು ಎಂದು ಸೂಚಿಸಿದರು.
ಶಿಷ್ಟಾಚಾರ, ಭದ್ರತೆ ಹಾಗೂ ಸಾರಿಗೆ ವ್ಯವಸ್ಥೆಗೆ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಶಾಮಿಯಾನ, ವೇದಿಕೆ, ಧ್ವನಿವರ್ಧಕ ವ್ಯವಸ್ಥೆ ಹಾಗೂ ನೆಲಹಾಸಿನ ವ್ಯವಸ್ಥೆ, ಊಟೋಪಚಾರದ ವ್ಯವಸ್ಥೆ, ಸ್ವಚ್ಛತೆ, ನೀರಿನ ವ್ಯವಸ್ಥೆ ಬಗ್ಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಸಮನ್ವಯತೆಯಿಂದ ಹೆಚ್ಚು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಯೋಗದ ಕುರಿತು ತಿಳುವಳಿಕೆ ಮೂಡಿಸುವ ಉದ್ದೇಶದಿಂದ ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವ ಜನತೆಗೆ ಹೆಚ್ಚಿನ ಗಮನ ಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಯುವ ಜನರು ಯೋಗಾಥಾನ್‍ದಲ್ಲಿ ಭಾಗವಹಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳಿಂದ ಸುಮಾರು 2300 ವಿದ್ಯಾರ್ಥಿಗಳು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈಗಾಗಲೇ ಕಳೆದ ಒಂದು ವಾರದಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಕುರಿತು ತರಬೇತಿ ನೀಡಲಾಗಿದೆ.
ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಲು ಈಗಾಗಲೇ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜು ಸಭೆಗೆ ತಿಳಿಸಿದರು. 8, 9 ಹಾಗೂ 10 ನೇ ತರಗರತಿಯ ಪ್ರೌಢಶಾಲೆಗಳಿಂದ ಒಟ್ಟು 5350 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಹೆಚ್ಚುವರಿಯಾಗಿ ಶಿಕ್ಷಕರನ್ನು ನಿಯೋಜನೆ ಮಾಡಿ ವಿದ್ಯಾರ್ಥಿಗಳನ್ನು ಕರೆ ತರಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು.
ಆಯುಷ್ ಅಧಿಕಾರಿ ಡಾ.ಶಿವಕುಮಾರ್ ಮಾತನಾಡಿ, ಪತಂಜಲಿ ಯೋಗ ಸಂಸ್ಥೆ, ಆರ್ಟ್ ಆಫ್ ಲಿವಿಂಗ್ ಸೇರಿದಂತೆ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳಿಂದ 800 ರಿಂದ 1000 ಜನ ಯೋಗಪಟುಗಳು ಭಾಗವಹಿಸುವರು ಎಂದು ತಿಳಿಸಿದರು.
ಯೋಗಥಾನ್ ಕಾರ್ಯಕ್ರವು ಪ್ರಾರ್ಥನೆ, ಧ್ಯಾನದಿಂದ ಪ್ರಾರಂಭವಾಗಿ ನಂತರ ಸುಲಭವಾದ ಯೋಗಾಸನಗಳನ್ನು ಯೋಗಾಭ್ಯಾಸ ಮಾಡಲಾಗುವುದು. ಕುಳಿತು ಹಾಗೂ ನಿಂತು ಮಾಡುವ ಯೋಗಾಸನಗಳು, 4 ಪ್ರಾಣಾಯಾಮ ಆಸನಗಳು ಸೇರಿದಂತೆ ಒಟ್ಟು 20 ಯೋಗಾಸನಗಳನ್ನು ಮಾಡಲಾಗುವುದು. ಕೊನೆಯಗೆ ಶಾಂತಿಮಂತ್ರದೊಂದಿಗೆ ಒಟ್ಟು 45 ನಿಮಿಷಗಳ ಕಾಲ ಯೋಗಾಭ್ಯಾಸ ನಡೆಯಲಿದೆ ಪತಂಜಲಿ ಯೋಗ ಸಂಸ್ಥೆಯ ಶ್ರೀನಿವಾಸ್ ಹೇಳಿದರು.
ಸ್ವಯಂಸೇವಕರಾಗಿ ಎನ್‍ಸಿಸಿ, ಎನ್‍ಎಸ್‍ಎಸ್ ವಿದ್ಯಾರ್ಥಿಗಳು: ಎನ್‍ಸಿಸಿ, ಎನ್‍ಎಸ್‍ಎಸ್ ಮಕ್ಕಳು ಸಮವಸ್ತ್ರದೊಂದಿಗೆ ಹಾಜರಾಗಿ, ಕಾರ್ಯಕ್ರಮದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಯೋಗಪಟುಗಳಿಗೆ ಉಪಾಹಾರ ವಿತರಿಸಲಿದ್ದಾರೆ.
ಎನ್‍ಸಿಸಿ ವತಿಯಿಂದ 200 ಮಕ್ಕಳು ಹಾಗೂ ಎನ್‍ಎಸ್‍ಎಸ್ ವತಿಯಿಂದ 500 ಮಕ್ಕಳು ಭಾಗವಹಿಸಲಿದ್ದಾರೆ ಎಂದು ಎನ್‍ಎಸ್‍ಎಸ್ ಅಧಿಕಾರಿ ಲೋಕೇಶ್ ನಾಯ್ಕ್ ಹಾಗೂ ಎನ್‍ಸಿಸಿ ಅಧಿಕಾರಿ ಡಾ.ಎಸ್.ಆರ್.ಲೇಪಾಕ್ಷ ಸಭೆಗೆ ಮಾಹಿತಿ ನೀಡಿದರು.
ಅಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಿ: ಯೋಗಾಥಾನ್ ಕಾರ್ಯಕ್ರಮಕ್ಕೆ ಸಾವಿರಾರು ಜನರು ಭಾಗವಹಿಸುವುದರಿಂದ ಆರೋಗ್ಯ ಇಲಾಖೆ ವತಿಯಿಂದ ಅಂಬುಲೈನ್ಸ್ ವ್ಯವಸ್ಥೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.
ಯೋಗಾಥಾನ್ ಕಾರ್ಯಕ್ರಮಕ್ಕೆ ವೈದ್ಯರು, ಶುಶ್ರೂಷಕಿಯರು ಹಾಗೂ ಔಷಧಿಗಳ ಪೂರೈಕೆಯೊಂದಿಗೆ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಆನಂದ ಪ್ರಕಾಶ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ತಹಶೀಲ್ದಾರ್ ಸತ್ಯನಾರಾಯಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಯೋಗಸಂಸ್ಥೆಗಳ ಪ್ರತಿನಿಧಿಗಳು ಇದ್ದರು.