ಶಿವಮೊಗ್ಗ : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19ರವರೆಗೆ ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ಸುಮಾರು 1800ಕ್ಕೂ ಹೆಚ್ಚು ಆಕ್ಷೇಪಣಾ ಅರ್ಜಿಗಳು ಸ್ವೀಕೃತವಾಗಿವೆ. ಮುಂದಿನ ಒಂದು ವಾರದೊಳಗೆ ಈ ಎಲ್ಲಾ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅಂತಿಮ ಕ್ಷೇತ್ರಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮುಂಬರುವ ಡಿಸೆಂಬರ್ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದ್ದು, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಡೆದಿರುವ ಪ್ರಕ್ರಿಯೆಗಳ ಮುಂದುವರಿದ ಭಾಗವಾಗಿ, ಪ್ರಸಕ್ತ ತಿಂಗಳಾಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಲಾಗುತ್ತದೆ. ಇದಾದ ಬಳಿಕ ಚುನಾವಣಾ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಅಧಿಕೃತವಾಗಿ ಆಯೋಗವೇ ಘೋಷಣೆ ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ.











